ಮಡಿಕೇರಿ, ಜ.20: ಮಳೆಯಿಂದ ಹಾನಿಯಾದ ಸರ್ಕಾರಿ ಕಟ್ಟಡಗಳ ದುರಸ್ತಿ ಸಂಬಂಧ ಕಾಮಗಾರಿ ವಿವರ ಹಾಗೂ ಅಂದಾಜು ಪಟ್ಟಿಯನ್ನು ಕೂಡಲೇ ಸಲ್ಲಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ನಿರ್ದೇಶನ ನೀಡಿದ್ದಾರೆ.
ಮಳೆಯಿಂದ ಹಾನಿಯಾದ ಸರ್ಕಾರಿ ಕಟ್ಟಡ ದುರಸ್ತಿ ಕಾಮಗಾರಿ ಕೈಗೊಳ್ಳುವ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಾಲೆ, ಅಂಗನವಾಡಿ, ವಿದ್ಯಾರ್ಥಿ ನಿಲಯ, ಕೃಷಿ, ತೋಟಗಾರಿಕೆ, ಪಶುಪಾಲನೆ ಇಲಾಖೆ ಕಚೇರಿ ಕಟ್ಟಡಗಳು, ನಾಡ ಕಚೇರಿ ಹೀಗೆ ವಿವಿಧ ಇಲಾಖೆಗಳ ಕಚೇರಿಗಳು ಮಳೆಯಿಂದ ಹಾನಿಯಾದ ಬಗ್ಗೆ ತಕ್ಷಣವೇ ಕಾಮಗಾರಿ ವಿವರ ಹಾಗೂ ಅಂದಾಜು ಪಟ್ಟಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಅವರು ಸರ್ಕಾರಿ ಕಟ್ಟಡಗಳ ದುರಸ್ತಿ ಕೈಗೊಳ್ಳುವ ಬಗ್ಗೆ ಮಾತನಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಮೋಹನ್, ಲೋಕೋಪಯೋಗಿ ಇಲಾಖೆಯ ಇಇ ಮದನ್ ಮೋಹನ್, ಜಿಲ್ಲಾ ಆಯುಷ್ ಅಧಿಕಾರಿ ರಾಮಚಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಚ್ಚಾಡೋ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಚಂದ್ರಶೇಖರ್, ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ತಮ್ಮಯ್ಯ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಭಾರತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಅರುಂಧತಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಭವಾನಿ, ಪೌರಾಯುಕ್ತರಾದ ರಮೇಶ್, ನಗರಾಭಿವೃದ್ಧಿ ಕೋಶದ ಎಇಇ ನಟರಾಜು, ತಹಶೀಲ್ದಾರ್ ಗೋವಿಂದರಾಜು, ಮಹೇಶ್, ತಾ.ಪಂ.ಇಒಗಳಾದ ಸುನಿಲ್ ಕುಮಾರ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಾದ ಸುಜಯ್ ಕುಮಾರ್, ಶ್ರೀಧರ್, ಶೈಲ, ಐಟಿಡಿಪಿ ಇಲಾಖೆಯ ವ್ಯವಸ್ಥಾಪಕರಾದ ದೇವರಾಜು, ಮಳೆಯಿಂದ ಹಾನಿಯಾದ ಕಟ್ಟಡಗಳಿಗೆ ಸಂಬಂಧಿಸಿದಂತೆ ಮಾಹಿತಿ ನೀಡಿದರು.