ಮಡಿಕೇರಿ ಜ. 21: ಕರ್ನಾಟಕ ಪ್ರಾಂತ್ಯ ರೈತ ಮತ್ತು ಕಾರ್ಮಿಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕ ರಚನೆಗೊಂಡಿದ್ದು, ಜ. 21 ರಿಂದ ಕಾರ್ಯಚಟುವಟಿಕೆ ಆರಂಭಗೊಳ್ಳಲಿದೆ ಎಂದು ವೇದಿಕೆಯ ಜಿಲ್ಲಾಧ್ಯಕ್ಷ ಕೆ.ಕೆ. ಶಶಿಕುಮಾರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಗರದ ಕೋಟೆ ಮಹಿಳಾ ಸಮಾಜದಲ್ಲಿ ಅಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಘಟಕ ಅಧಿಕೃತವಾಗಿ ಉದ್ಘಾಟನೆಗೊಳ್ಳಲಿದ್ದು, ವೇದಿಕೆಯ ರಾಜ್ಯಾಧ್ಯಕ್ಷ ಜವರೇಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ದೇವರಾಜ್, ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ಕುಮಾರ್ ಪಾಟೀಲ್ ಮತ್ತಿತರ ಪ್ರಮುಖರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ತಿಳಿಸಿದರು.

ರಾಜ್ಯದ ರೈತರು ಹಾಗೂ ಕಾರ್ಮಿಕರು ಹಲವಾರು ಮೂಲಭೂತ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಇವರ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ಇದೇ ಕಾರಣಕ್ಕೆ ಈ ವರ್ಗದ ಮಂದಿಯ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಆರೋಪಿಸಿದರು. ನೊಂದ ಕುಟುಂಬಗಳಿಗೆ ನ್ಯಾಯ ಮತ್ತು ರಕ್ಷಣೆ ನೀಡುವ ಉದ್ದೇಶದಿಂದ ಜಿಲ್ಲೆಯಲ್ಲಿಯೂ ವೇದಿಕೆಯನ್ನು ಅಸ್ತಿತ್ವಕ್ಕೆ ತರಲಾಗುತ್ತಿದೆ ಎಂದು ಶಶಿಕುಮಾರ್ ಮಾಹಿತಿ ನೀಡಿದರು.

ಗೋಷ್ಠಿಯಲ್ಲಿ ವೇದಿಕೆಯ ಪದಾಧಿಕಾರಿಗಳಾದ ಉದಯ ಕುಮಾರ್, ಪ್ರವೀಣ್, ಪದ್ಮನಾಭ ಹಾಗೂ ಪಳಂಗಪ್ಪ ಉಪಸ್ಥಿತರಿದ್ದರು.