ಮಡಿಕೇರಿ, ಜ.24: ರಾಷ್ಟ್ರೀಯ ಮತದಾರರ ದಿನ ಪ್ರಯುಕ್ತ ಮತದಾರರ ಪ್ರತಿಜ್ಞಾ ವಿಧಿಯನ್ನು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಶುಕ್ರವಾರ ಬೋಧಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ, ಜನಾಂಗ, ಜಾತಿ,ಮತ, ಭಾಷೆ ಅಥವಾ ಯವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆಂದು ಈ ಮೂಲಕ ಪ್ರತಿಜ್ಞೆ ಸ್ವೀಕರಿಸುತ್ತೇನೆ ಎಂದು ಜಿಲ್ಲಾಧಿಕಾರಿ ಬೋಧಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ನಾನಾ ಇಲಾಖೆ ಅಧಿಕಾರಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ನಗರದ ಪ್ರವಾಸೋದ್ಯಮ ಇಲಾಖೆಯಲ್ಲಿ ಇಂದು ಇಲಾಖೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಸಾರ್ವತ್ರಿಕ ಚುನಾವಣೆಯಲ್ಲಿ ಕಡ್ಡಾಯ ಮತ ಚಲಾಯಿಸುವಂತೆ ಪ್ರತಿಜ್ಞೆ ಸ್ವೀಕರಿಸಿದರು. ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕ ಚೇತನ್ ಪ್ರತಿಜ್ಞಾ ವಿಧಿ ಭೋದಿಸಿದರು. ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಪ್ರಬಾರ ಉಪನಿರ್ದೇಶಕ ರಾಘವೇಂದ್ರ ಹಾಗೂ ಇತರರು ಹಾಜರಿದ್ದರು.