ಕೂಡಿಗೆ, ಫೆ. 12: ಕೂಡುಮಂಗಳೂರು ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿಸುವ ವಿಷಯ ಕುರಿತು ಮೂರನೇ ಪೂರ್ವಭಾವಿ ಸಭೆಯು ಕೂಡುಮಂಗಳೂರು ಸಮುದಾಯ ಭವನದ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಕೆ. ವರದ ಹಿಂದಿನ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಕಾರ್ಯಮುಖರಾಗಿರುವ ಬಗ್ಗೆ ಸಭೆಗೆ ಸಮಗ್ರವಾಗಿ ಮಾಹಿತಿ ನೀಡಿದರು. ಗ್ರಾಮಸ್ಥರ ಅಭಿಪ್ರಾಯದಂತೆ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಅವರಿಗೆ ಮಾಹಿತಿ ನೀಡುವುದರ ಜೊತೆಗೆ ಸರಕಾರಕ್ಕೆ ಗ್ರಾಮ ಪಂಚಾಯಿತಿಯ ವರದಿಯನ್ನು ಸಲ್ಲಿಸಲು ಕ್ರಮ ಕೈಗೊಳ್ಳಲು ಮನವಿ ಸಲ್ಲಿಸುವಂತೆ ತೀರ್ಮಾನ ತೆಗೆದುಕೊಳ್ಳಲಾಯಿತು. ಅಲ್ಲದೆ ಜಿಲ್ಲೆಯ ಎಲ್ಲಾ ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ತು ಸದಸ್ಯರನ್ನು ಭೇಟಿ ಮಾಡಿ ಗ್ರಾಮ ಪಂಚಾಯಿತಿಯನ್ನು ಮೇಲ್ದರ್ಜೆಗೆ ಏರಿಸುವ ವಿಷಯವಾಗಿ ಲಿಖಿತ ದಾಖಲೆಗಳನ್ನು ನೀಡುವ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಿ, ತಾಲೂಕು ಪಂಚಾಯಿತಿ ಸದಸ್ಯ ಗಣೇಶ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯೆ ಫಿಲೋಮಿನಾ, ಸಮಿತಿಯ ಪ್ರಧಾನ ಕಾರ್ಯದರ್ಶಿ ವಕೀಲ ಭರತ್ ಮಾಚಯ್ಯ, ಕಾರ್ಯದರ್ಶಿ ಕುಮಾರಸ್ವಾಮಿ ಸೇರಿದಂತೆ ಸಮಿತಿಯ ಸದಸ್ಯರು ಗ್ರಾಮಸ್ಥರು ಹಾಜರಿದ್ದರು.