ವೀರಾಜಪೇಟೆ, ಫೆ. 14: ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡದ ಮುಂದುವರೆದ ಕಾಮಗಾರಿ ಹಾಗೂ ತಡೆಗೋಡೆ ಕಾಮಗಾರಿಗೆ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಭೂಮಿಪೂಜೆ ಸಲ್ಲಿಸಿ ಕಾಮಗಾರಿಗೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಶಾಸಕ ಕೆ.ಜಿ. ಬೋಪಯ್ಯ, ಕಾಲೇಜಿನ ಮುಂದುವರೆದ ಕೊಠಡಿ ಮತ್ತು ತಡೆಗೋಡೆ ನಿರ್ಮಾಣಕ್ಕಾಗಿ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಿದ್ದು ಅತಿ ಬೇಗ ಕೆಲಸ ಪ್ರಾರಂಭವಾಗಲಿದೆ. ಅಲ್ಲದೇ ಮುಂದಿನ ದಿನಗಳಲ್ಲಿ ಸ್ನಾತಕೋತ್ತರ ವಿಭಾಗವನ್ನು ಪ್ರಾರಂಭ ಮಾಡಲು ಎರಡು ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು. ವಿದ್ಯಾರ್ಥಿಗಳು ವಿದ್ಯಾ ಸಂಸ್ಥೆಯನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಶಿಕ್ಷಣವನ್ನು ಮಾಡಬೇಕು ಎಂದರು.

ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲ ಡಾ. ಟಿ.ಕೆ. ಬೋಪಯ್ಯ, ಕಾಲೇಜು ಅಭಿವೃದ್ಧಿ ಮಂಡಳಿ ಸದಸ್ಯರು, ವೀರಾಜಪೇಟೆ ಪಟ್ಟಣ ಪಂಚಾಯಿತಿ ಸದಸ್ಯರು, ರೈಟ್ಸ್ ಸಂಸ್ಥೆಯ ಇಂಜಿನಿಯರ್ ಮತ್ತು ಸಿಬ್ಬಂದಿಗಳು, ಕಾಲೇಜಿನ ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.