ಮಡಿಕೇರಿ, ಫೆ. 16: ಕರ್ನಾಟಕ ಬೆಳೆಗಾರರ ಒಕ್ಕೂಟದ ಮಾಜಿ ಅಧ್ಯಕ್ಷ ಬಿ.ಎಸ್. ಜೈರಾಂ ನೇತೃತ್ವದಲ್ಲಿ ಕರ್ನಾಟಕ ಬೆಳೆಗಾರರ ಒಕ್ಕೂಟದ ನಿಯೋಗವು ರಾಜ್ಯ ಸರ್ಕಾರದ ಉಪ ಮುಖ್ಯಮಂತ್ರಿ ಡಾ. ಅಶ್ವಥ ನಾರಾಯಣ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.
2017-18 ರ ಬಜೆಟ್‍ನಲ್ಲಿ ಸರ್ಕಾರಿ ಭೂಮಿಯನ್ನು ಬೆಳೆಗಾರರಿಗೆ ಗುತ್ತಿಗೆ ಆಧಾರದಲ್ಲಿ ನೀಡುವುದಾಗಿ ಘೋಷಿಸಲಾಗಿತ್ತು. ಅದರಂತೆ ರೂಪುಗೊಂಡ ನಿಯಮಗಳು ಬೆಳೆಗಾರರ ಪರವಾಗಿ ಇಲ್ಲ. ಎಲ್ಲಾ ಬೆಳೆಗಾರರ ಹಿತದೃಷ್ಟಿಯಿಂದ ಕರ್ನಾಟಕ ಬೆಳೆಗಾರರ ಒಕ್ಕೂಟದ ಸಲಹೆಗಳನ್ನು ಪರಿಗಣಿಸಿ, ಸರ್ಕಾರಿ ಭೂಮಿಯನ್ನು ಗುತ್ತಿಗೆ ಆಧಾರದಲ್ಲಿ ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಬೆಳೆಗಾರರಿಗೆ ನೀಡಬೇಕೆಂದು ಮನವಿ ಮಾಡಲಾಯಿತು.
ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಬೋಜೇಗೌಡ, ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ಇದ್ದರು. ಬೆಳೆಗಾರರ ಒಕ್ಕೂಟದ ಮನವಿ ಸ್ವೀಕರಿಸಿದ ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಯು.ಎಂ. ತೀರ್ಥಮಲ್ಲೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.