ಸಿದ್ದಾಪುರ, ಫೆ. 15: ಶಾಶ್ವತ ಸೂರಿಗಾಗಿ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಡಿಗೋಡು ಹಾಗೂ ಗುಹ್ಯ ಭಾಗದ ಪ್ರವಾಹ ಸಂತ್ರಸ್ತರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ 6ನೇ ದಿನ ಪೂರೈಸಿದೆ.
ಸಿದ್ದಾಪುರ ಗ್ರಾಮ ಪಂಚಾಯತಿ ಮುಂದೆ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ರಾಜ್ಯ ಉಚ್ಚನ್ಯಾಯಾಲಯದ ವಕೀಲ ಹಾಗೂ ಕಾಂಗ್ರೆಸ್ ಮುಖಂಡ ಹೆಚ್.ಎಸ್ ಚಂದ್ರಮೌಳಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರು. ಈ ಸಂದರ್ಭ ಮಾತನಾಡಿದ ಅವರು, ಸಂತ್ರಸ್ತರ ಪರವಾಗಿ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸುವ ಮೂಲಕ ಕಾನೂನು ಹೋರಾಟ ಮಾಡುವುದಾಗಿ ಸಂತ್ರಸ್ತರಿಗೆ ಸ್ಥೈರ್ಯ ತುಂಬಿದರು. ಇದಕ್ಕಾಗಿ 15 ದಿನಗಳ ಕಾಲಾವಕಾಶ ಕೇಳಿದ ಅವರು, ವಸತಿ ಸಚಿವ ಸೋಮಣ್ಣ ಅವರ ಬಳಿ ಸಂತ್ರಸ್ತರ ನಿಯೋಗವೊಂದು ತೆರಳಲು ವ್ಯವಸ್ಥೆ ಮಾಡುವುದಾಗಿ ತಿಳಿಸಿದರಲ್ಲದೆ ಮುಂದಿನ ದಿನಗಳಲ್ಲಿ ಶಾಸಕರ ಮನೆಯ ಮುಂದೆ ಪ್ರತಿಭಟಿಸುವುದಾಗಿ ಎಚ್ಚರಿಸಿದರು.
ಈ ಸಂದರ್ಭ ಪ್ರಮುಖರಾದ ನೆರವಂಡ ಉಮೇಶ್, ಕೆ.ಯು ಅಬ್ದುಲ್ ರಝಾಕ್, ಬಿ.ಪಿ ಚಂದ್ರಶೇಖರ್, ಎಂ.ಎ ಜಫರುಲ್ಲಾ, ಫ್ರಾನ್ಸಿಸ್, ಮಥಾಯಿ, ನಾಪೋಕ್ಲು ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಎ. ಇಸ್ಮಾಯಿಲ್, ಜಿಲ್ಲಾ ಪಂಚಾಯತಿ ಸದಸ್ಯೆ ಸುನಿತಾ ಮಂಜುನಾಥ್, ತಾಲೂಕು ಪಂಚಾಯತಿ ಸದಸ್ಯೆ ಸುಹಾದ ಅಶ್ರಫ್, ನೆಲ್ಯಹುದಿಕೇರಿ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಸಫಿಯ ಮುಹಮ್ಮದ್, ಸದಸ್ಯ ಎ.ಕೆ ಹಕೀಂ ಮತ್ತಿತರರು ಇದ್ದರು.
ಅಹೋರಾತ್ರಿ ಹೋರಾಟಕ್ಕೆ ಸಿದ್ದಾಪುರ ಹಾಗೂ ನೆಲ್ಯಹುದಿಕೇರಿಯ ಆಟೋ ಚಾಲಕರ ಸಂಘ ಶನಿವಾರ ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ಆಟೋ ಚಾಲನೆ ಸ್ಥಗಿತಗೊಳಿಸುವ ಮೂಲಕ ಬೆಂಬಲ ಸೂಚಿಸಿತು.
ಸದÀನದಲ್ಲಿ ಪ್ರಸ್ತಾಪ
ಪ್ರವಾಹ ಸಂತ್ರಸ್ತರಿಗೆ ಕೂಡಲೇ ಪುನರ್ವಸತಿ ಕಲ್ಪಿಸುವುದರ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಹೇಳಿದರು.
ಸಂತ್ರಸ್ತರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಗಮನಕ್ಕೂ ತರಲಾಗುವುದು ಎಂದರು. ಜಿಲ್ಲಾ ಪಂಚಾಯತ್ ಸದಸ್ಯೆ ಕೆ.ಪಿ. ಚಂದ್ರಕಲಾ ಮಾತನಾಡಿ, ಸರಕಾರ ಎಚ್ಚೆತ್ತುಕೊಂಡು ಕೂಡಲೇ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಿಕೊಡುವಂತೆ ಒತ್ತಾಯಿಸಿದರು.
ಈ ಸಂದರ್ಭ ಸಂತ್ರಸ್ತರ ಮಹಿಳೆಯರು ತಾವು ಮತ ಹಾಕಿ ಗೆಲ್ಲಿಸಿದ ಜಿಲ್ಲಾ ಪಂಚಾಯತಿ ಸದಸ್ಯೆ ಈವರೆಗೂ ತಮ್ಮ ಸಂಕಷ್ಟಕ್ಕೆ ಸ್ಪಂದಿಸದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ವೀಣಾ ಅಚ್ಚಯ್ಯ ಹಾಗೂ ಚಂದ್ರಕಲಾ ಅವರ ಬಳಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ತಾಲೂಕು ಪಂಚಾಯತಿ ಸದಸ್ಯ ಅಪ್ರು ರವೀಂದ್ರ, ಮಡಿಕೇರಿ ನಗರಸಭೆಯ ಮಾಜಿ ಅಧ್ಯಕ್ಷ ನಂದಕುಮಾರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಿನಾಸ್ ಪ್ರವೀಣ್, ತಾಲೂಕು ಪಂಚಾಯತಿ ಮಾಜಿ ಸದಸ್ಯ ಪಿ.ವಿ ಜಾನ್ಸನ್, ವಲಯ ಅಧ್ಯಕ್ಷ ಮೂಸಾ ಇದ್ದರು..
ನೆಲ್ಯಹುದಿಕೇರಿ: ಆಹೋರಾತ್ರಿ ಹೋರಾಟಕ್ಕೆ ಸಿದ್ದಾಪುರ ಹಾಗೂ ನೆಲ್ಯಹುದಿಕೇರಿಯ ಆಟೋ ಚಾಲಕರ ಸಂಘ ಶನಿವಾರ ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ಆಟೋ ಚಾಲನೆ ಸ್ಥಗಿತಗೊಳಿಸುವ ಮೂಲಕ ಬೆಂಬಲ ಸೂಚಿಸಿತು.
ಪ್ರತಿಭಟನೆಗೆ ಬೆಂಬಲ
ಸಿದ್ದಾಪುರ, ಕರಡಿಗೊಡು ಮತ್ತು ಗುಹ್ಯ ಗ್ರಾಮ ವ್ಯಾಪ್ತಿಯಲ್ಲಿ ನದಿದಂಡೆಯ ಮೇಲೆ ವಾಸಿಸುತ್ತಿದ್ದ 250 ಕ್ಕೂ ಹೆಚ್ಚು ಕುಟುಂಬಗಳು ಅತಿವೃಷ್ಟಿ ಹಾನಿಯಿಂದ ಮನೆಗಳನ್ನು ಕಳೆದುಕೊಂಡಿದ್ದು, ಮಳೆಗಾಲಕ್ಕೂ ಮೊದಲು ಸಂತ್ರಸ್ತರಿಗೆ ಪರ್ಯಾಯ ನಿವೇಶನ ಹಂಚಿಕೆ ಮಾಡಿ ಮನೆ ನಿರ್ಮಿಸಲು ಸಹಕಾರ ನೀಡಬೇಕೆಂದು ಕೆಪಿಸಿಸಿ ಸದಸ್ಯ ಟಿ.ಪಿ. ರಮೇಶ್ ಒತ್ತಾಯಿಸಿದ್ದಾರೆ.
ಸಿದ್ದಾಪುರದಲ್ಲಿ ಸಂತ್ರಸ್ತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಿದ ಅವರು ಸಂಕಷ್ಟದಲ್ಲಿರುವ ಸಂತ್ರಸ್ತರನ್ನು ಯಾವುದೇ ಕಾರಣಕ್ಕೂ ಜಿಲ್ಲಾಡಳಿತ ಕಡೆಗಣಿಸಬಾರದು ಎಂದರು.
ಜಿಲ್ಲಾ ಲೇಖಕ ಕಲಾವಿದರ ಬಳಗದ ಕಾರ್ಯದರ್ಶಿ ಕೆ.ಟಿ. ಬೇಬಿಮ್ಯಾಥ್ಯು ಮಾತನಾಡಿ ಸಂವಿಧಾನದ ಆಶಯದಂತೆ ಎಲ್ಲರಿಗೂ ಮೂಲಭೂತ ಸೌಕರ್ಯ ಕಲ್ಪಿಸಬೇಕಾಗಿರುವುದು ಸರಕಾರದ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಶೀಘ್ರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದರು. ಮೂಡಾ ಮಾಜಿ ಅಧ್ಯಕ್ಷ ಚುಮ್ಮಿ ದೇವಯ್ಯ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿದರು.