ಮಡಿಕೇರಿ, ಫೆ.16 : ಸರ್ಕಾರಿ ಜಾಗದಲ್ಲಿ ನೆಲೆನಿಂತಿರುವ ಬಡಜನರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಒಕ್ಕಲೆಬ್ಬಿಸುವುದಿಲ್ಲವೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭರವಸೆ ನೀಡಿರುವುದಾಗಿ ಬಹುಜನ ಕಾರ್ಮಿಕ ಸಂಘದ ಅಧ್ಯಕ್ಷ ಹಾಗೂ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ರಾಜ್ಯ ಕಾರ್ಯದರ್ಶಿ ಕೆ.ಮೊಣ್ಣಪ್ಪ ತಿಳಿಸಿದ್ದಾರೆ.

ಬಹುಜನ ಕಾರ್ಮಿಕರ ಸಂಘ ಹಾಗೂ ಭೂಮಿ ಮತ್ತು ವಸತಿ ಹಕ್ಕು ವಂಚಿತ ಹೋರಾಟ ಸಮಿತಿ ವತಿಯಿಂದ ಕೇಂದ್ರ ಸಮಿತಿ ಅಧ್ಯಕ್ಷ ಹಾಗೂ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್. ದೊರೆಸ್ವಾಮಿ ಅವರ ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಕೊಡಗು ಜಿಲ್ಲೆಯ ಬಾಳುಗೋಡು ನಿರಾಶ್ರಿತರು ಸೇರಿದಂತೆ ಇತರ ಬಡವರ್ಗದ ಮಂದಿಯ ಸಮಸ್ಯೆಗಳ ಬಗ್ಗೆ ಚರ್ಚಿಸಿದಾಗ ಈ ಭರವಸೆ ದೊರೆತಿದೆ ಎಂದು ಮೊಣ್ಣಪ್ಪ ಹೇಳಿದ್ದಾರೆ.

ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಬಡವರನ್ನು ಒಕ್ಕಲೆಬ್ಬಿಸದಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಮತ್ತೊಂದು ಬಾರಿ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಭೂಮಿ ಮತ್ತು ವಸತಿ ಸಮಸ್ಯೆಗಳ ತ್ವರಿತ ಪರಿಹಾರಕ್ಕಾಗಿ ಶೀಘ್ರ ಉನ್ನತ ಮಟ್ಟದ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ದೊರೆಸ್ವಾಮಿ ಭೇಟಿ

ಹಿರಿಯರಾದ ದೊರೆಸ್ವಾಮಿ ಅವರು ತಾ.18 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಿ ಬಾಳುಗೋಡು ನಿರಾಶ್ರಿತರ ಬೇಡಿಕೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಗಮನ ಸೆಳೆಯಲಿದ್ದಾರೆ, ಅಲ್ಲದೆÀ ಬಾಳುಗೋಡು ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ ಎಂದು ಕೆ.ಮೊಣ್ಣಪ್ಪ ತಿಳಿಸಿದ್ದಾರೆ.