ಸೋಮವಾರಪೇಟೆ, ಫೆ. 25: ಸರ್ಕಾರದ ಅನುದಾನದಲ್ಲಿ ಬಿಡುಗಡೆಯಾದ ಹಣದಲ್ಲಿ ಕಳಪೆ ಕಾಮಗಾರಿ ನಡೆಸಿರುವ ಗುತ್ತಿಗೆದಾರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಶಾಸಕ ಅಪ್ಪಚ್ಚು ರಂಜನ್ ಸಂಬಂಧಿಸಿದ ಇಲಾಖೆಯ ಮೇಲಧಿಕಾರಿಗಳಿಗೆ ಸೂಚಿಸಿದ್ದಾರೆ.
ಗಣಗೂರು ರಸ್ತೆ ಪರಿಶೀಲಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಜಿಲ್ಲೆಯ ರಸ್ತೆಗಳ ಅಭಿವೃದ್ಧಿಗಾಗಿ ಕೋಟ್ಯಾಂತರ ರೂಪಾಯಿ ಅನುದಾನ ನೀಡಿದೆ. ಆದರೆ, ಕೆಲವು ಗುತ್ತಿಗೆದಾರರು ರಸ್ತೆ ಕಾಮಗಾರಿಯನ್ನು ಕಳಪೆ ಮಾಡುತ್ತಿರುವದು ಗಮನಕ್ಕೆ ಬಂದಿದ್ದು, ಇದನ್ನು ಸಹಿಸಲು ಸಾಧ್ಯವಿಲ್ಲ. ಕೊತ್ತನಳ್ಳಿ ಗ್ರಾಮದಲ್ಲಿ ಇತ್ತೀಚೆಗಷ್ಟೆ ನಿರ್ಮಾಣಗೊಂಡಿರುವ ರಸ್ತೆ ಈಗಾಗಲೇ ಕಿತ್ತು ಬರುತ್ತಿದೆ. ಗಣಗೂರು ಗ್ರಾಮದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ 8 ಇಂಚು ಜೆಲ್ಲಿ ಹಾಕಬೇಕಾಗಿದ್ದರೂ, ಕೇವಲ 3 ಇಂಚು ಹಾಕಲಾಗಿದೆ. ಸರ್ಕಾರ ಸಾಕಷ್ಟು ಹಣ ನೀಡುವಾಗ ಅದಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು.
ಈ ಬಗ್ಗೆ ವೀಡಿಯೋ ಸಹಿತ ಮಂಗಳೂರಿನ ಸೂಪರಿಂಡೆಂಟ್ ಇಂಜಿನಿಯರ್ ಅವರಿಗೆ ದೂರು ಸಲ್ಲಿಸಲಾಗಿದೆ ಎಂದರು.
ನಾಡ್ನಳ್ಳಿ ಸಮೀಪ ನಿರ್ಮಿಸುತ್ತಿರುವ ಕಾಂಕ್ರೀಟ್ ರಸ್ತೆಯ ಕೆಲಸವು ಕಳಪೆಯಾಗುತ್ತಿರುವ ಬಗ್ಗೆ ಹಾಗೂ ಕಾಂಕ್ರೀಟ್‍ಗೆ ಮಣ್ಣು ಮಿಶ್ರಣವಾಗಿರುವ ಬಗ್ಗೆ ಗಮನಕ್ಕೆ ಬಂದಿದೆ. ಕಾಮಗಾರಿಗಳ ಬಗ್ಗೆ ಅಧಿಕಾರಿಗಳು ಜಾಗೃತರಾಗಿರಬೇಕು ಹಾಗೂ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು. ಈಗಾಗಲೇ ಮುಗಿದಿರುವ ಕಾಮಗಾರಿಗಳನ್ನು ಗುಣಮಟ್ಟ ಪರಿಶೀಲನಾ ಅಧಿಕಾರಿಗಳು ಹಾಗೂ ಉನ್ನತ ಮಟ್ಟದ ಅಧಿಕಾರಿಗಳು ಬಂದು ಪರಿಶೀಲಿಸುವಂತೆ ಸೂಚಿಸಿದ್ದೇನೆ ಎಂದರು.