ಮಡಿಕೇರಿ, ಫೆ. 27: ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಕೋಟ್ಪಾ ಕಾಯ್ದೆ ಉಲ್ಲಂಘನೆಯಾಗುವ ಸ್ಥಳಗಳಲ್ಲಿ ಶಾಲಾ ವಿದ್ಯಾರ್ಥಿಗಳು ಗುಲಾಬಿ ಹೂ ನೀಡುವ ಮೂಲಕ ಜಾಗೃತಿ ಮೂಡಿಸಿದರು. ನಗರದ ಬಾಲಭವನದಿಂದ ಹೊರಟ ವಿದ್ಯಾರ್ಥಿಗಳ ತಂಡದ ಜಾಗೃತಿ ಜಾಥಾವು ನಗರದ ಪ್ರಮುಖ ರಸ್ತೆಗಳಲ್ಲಿ ಗುಲಾಬಿ ಹೂ ನೀಡಿ ತಂಬಾಕಿನ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸಿದರು. ಜಾಗೃತಿ ಜಾಥಾಗೆ ಚಾಲನೆ ನೀಡಿದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ ಅವರು ಮಾತನಾಡಿ ಧೂಮಪಾನ ಆರೋಗ್ಯಕ್ಕೆ ಹಾನಿಕರವಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಕಾರಣಕ್ಕೂ ಧೂಮಪಾನ ಮಾಡಬಾರದು. ಧೂಮಪಾನ ಮಾಡುವುದು ಕಂಡು ಬಂದಲ್ಲಿ ದಂಡ ಪಾವತಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್ ಮಾತನಾಡಿ, ಶಾಲಾ-ಕಾಲೇಜು ವ್ಯಾಪ್ತಿಯಲ್ಲಿ 100 ಗಜ ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ಮಾಡುವಂತಿಲ್ಲ. ಧೂಮಪಾನ ಮಾಡಬಾರದು. ಆ ನಿಟ್ಟಿನಲ್ಲಿ ತಂಬಾಕಿನಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮಾಧಿಕಾರಿ ಡಾ. ಶಿವಕುಮಾರ್ ಇತರರು ಇದ್ದರು.