ಗೋಣಿಕೊಪ್ಪಲು, ಫೆ. 27: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಒತ್ತುವರಿಯಾಗಿರುವ ಸರ್ಕಾರಿ ಜಮೀನಿನ ಕುರಿತು ಸಮಗ್ರ ವರದಿನೀಡುವಂತೆ ಕರ್ನಾಟಕ ರಾಜ್ಯ ಸರಕಾರಿ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷ, ಶಾಸಕ ಕೆ.ಜಿ. ಬೋಪಯ್ಯ ಗುರುವಾರದಂದುಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. (ಮೊದಲ ಪುಟದಿಂದ) ಬೆಂಗಳೂರಿನ ವಿಧಾನಸೌಧದ 106 ಸಂಖ್ಯೆಯ ಸಮಿತಿ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಸರಕಾರಿ ಜಮೀನು ಸಂರಕ್ಷಣಾ ಸಮಿತಿಯ ಮೊದಲ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೆ.ಜಿ. ಬೋಪಯ್ಯ ಅವರು, ರಾಜ್ಯದಲ್ಲಿ ಸಾಕಷ್ಟು ಏಕರೆ ಸರಕಾರಿ ಜಮೀನು ಒತ್ತುವರಿಯಾದ ಕುರಿತು ವ್ಯಾಪಕ ದೂರುಗಳಿವೆ. ಇದನ್ನು ಸರಕಾರ ಗಂಭೀರವಾಗಿ ಪರಿಗಣಿಸಲಿದೆ. ಈ ಹಿನ್ನೆಲೆ ಅಧಿಕಾರಿಗಳು ಯಾವುದೇ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾದ ತನಿಖೆ ನಡೆಸಿ ಕೂಡಲೇ ಸಮರ್ಪಕವಾದ ವರದಿ ನೀಡುವಂತೆ ಅಧಿಕಾರಿಗಳಿಗೆ ಆದೇಶ ನೀಡಿದರು. ಬೆಂಗಳೂರು ನಗರದಲ್ಲೇ ಸಾಕಷ್ಟು ಸರ್ಕಾರಿ ಜಮೀನನ್ನು ಅನಧಿಕೃತವಾಗಿ ಬಳಸಿಕೊಳ್ಳಲಾಗಿದೆ ಎಂಬ ಮಾಹಿತಿ ಸರಕಾರದ ಬಳಿ ಇದೆ. ಅದ್ದರಿಂದ ಸರ್ಕಾರಿ ಜಮೀನು ಒತ್ತುವರಿಯನ್ನು ಮೊದಲು ಪತ್ತೆಹಚ್ಚಿ ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಳ್ಳಲು ಮೊದಲ ಆದ್ಯತೆ ನೀಡಲಾಗುವುದು. ಆದ್ದರಿಂದ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯಪ್ರವೃತ್ತರಾಗುವಂತೆ ಬೋಪಯ್ಯ ಕಿವಿಮಾತು ಹೇಳಿದರು. ಸಭೆಯಲ್ಲಿ ಸಮಿತಿಯ ಸದಸ್ಯರಾಗಿರುವ ರಾಜ್ಯದ ವಿವಿಧ ಕ್ಷೇತ್ರದ ಶಾಸಕರುಗಳಾದ ಅರಗ ಜ್ಞಾನೇಂದ್ರ, ವಿಶ್ವನಾಥ್, ರಾಜೇಗೌಡ ಅವರು ಹಾಜರಿದ್ದರು. ಕರ್ನಾಟಕ ಸಾರ್ವಜನಿಕ ಜಮೀನುಗಳ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರೂ ಆಗಿರುವ ಸಮಿತಿ ಕಾರ್ಯದರ್ಶಿ ಮನೋಜ್ ಜೈನ್ ಸೇರಿದಂತೆ ರಾಜ್ಯ ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿ, ಬಿಬಿಎಂಪಿ ಹಿರಿಯ ಅಧಿಕಾರಿಗಳು, ಬಿಡಿಎ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.