ಮಡಿಕೇರಿ, ಫೆ. 28: ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಸಮಾಜಕಾರ್ಯ ವಿಭಾಗದ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು, ಗಾಳಿಬೀಡು ಗ್ರಾಮ ಪಂಚಾಯಿತಿ ಹಾಗೂ ಕೊಡಗು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಗಾಳಿಬೀಡು ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮಕ್ಕಳ ಹಕ್ಕುಗಳ ರಕ್ಷಣೆಯ ಬಗ್ಗೆ ಅರಿವು ಮೂಡಿಸುವ ಮಾಹಿತಿ ಕಾರ್ಯಾಗಾರ ಆಯೋಜಿಸಲಾಗಿತ್ತು.

ಶಾಲಾ ಮುಖ್ಯೋಪಾಧ್ಯಾಯಿನಿ ದಮಯಂತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳಾದ ಅಬ್ದುಲ್ ನಿಸಾರ್ ಮತ್ತು ಸಚಿನ್ ಸುವರ್ಣ ಮಕ್ಕಳಿಗೆ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡುವುದರ ಮೂಲಕ ಅರಿವು ಮೂಡಿಸಿದರು. ಮುಖ್ಯ ಅತಿಥಿಗಳಾಗಿ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಮೋಹನ್‍ಕುಮಾರ್ ಪಾಲ್ಗೊಂಡಿದ್ದರು. ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು.