ಮಡಿಕೇರಿ, ಮಾ. 6: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ಮೋಹನ್ ನೇತೃತ್ವದಲ್ಲಿ ಕೋವಿಡ್ 19 (ಕೊರೊನ) ವೈರಸ್ ಬರದಂತೆ ಮುನ್ನೆಚ್ಚರಿಕೆ ವಹಿಸುವ ಕುರಿತು ಪೂರ್ವಭಾವಿ ಸಭೆ ಅವರ ಕಚೇರಿಯಲ್ಲಿ ನಡೆಯಿತು.

ಸಭೆಯಲ್ಲಿ ಕೊರೊನ ವೈರಸ್ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ಬಸ್ ಹಾಗೂ ಆಟೋ ನಿಲ್ದಾಣಗಳಲ್ಲಿ ಕೋವಿಡ್ 19 (ಕೊರೊನ) ವೈರಸ್ ಬಗ್ಗೆ ಅರಿವು ಮೂಡಿಸಲು ಅಧಿಕಾರಿಗಳಿಗೆ ತಿಳಿಸಿದರು. ತಾಲೂಕು ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಕಚೇರಿ ಸಿಬ್ಬಂದಿಯನ್ನು ಬಳಸಿಕೊಂಡು ಜನನಿಬಿಡ ಪ್ರದೇಶದಲ್ಲಿ ಬ್ಯಾನರ್‍ಗಳು ಮತ್ತು ಕರಪತ್ರದ ಮೂಲಕ ಪ್ರಯಾಣಿಕರು ಮತ್ತು ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಮಾಹಿತಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅವರು ತಿಳಿಸಿದರು. ಈಗಾಗಲೇ ಜಿಲ್ಲೆಯ ಕುಟ್ಟ, ಮಾಕುಟ್ಟ, ಕರಿಕೆಗಳಲ್ಲಿ ಅರಿವು ಮೂಡಿಸಲಾಗುತ್ತಿದ್ದು, ಹೆಚ್ಚಿನ ನಿಗಾವಹಿಸುವ ಸಲುವಾಗಿ ಜಿಲ್ಲೆಯ ಎಲ್ಲಾ ಭಾಗಗಳಲ್ಲಿ ಈ ಕಾರ್ಯ ನಡೆಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.