ಮಡಿಕೇರಿ, ಮಾ. 10: ಕೊರೊನಾ ವೈರಸ್ ಬಗ್ಗೆ ಭಯಬೇಡ. ಈ ವೈರಸ್ ಬಗ್ಗೆ ಈಗಾಗಲೇ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ. ವೈರಸ್ ಬಗ್ಗೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್ ಹೇಳಿದ್ದಾರೆ.
ನಗರದ ಜೂನಿಯರ್ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಭಾಂಗಣದಲ್ಲಿ ಪ್ರಾಥಮಿಕ ಶಾಲಾ ಮುಖ್ಯೋಪಾ ದ್ಯಾಯರಿಗೆ ಮಂಗಳವಾರ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳಲ್ಲಿ ಕೊರೊನಾ ವೈರಸ್ ಹರಡಿದ್ದು, ಕೊರೊನಾ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ವೈರಸ್ ಆಗಿದೆ. ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದು ಹೇಳಿದರು.
ಸೋಂಕಿತರು ಸೀನಿದಾಗ, ಕೆಮ್ಮಿದಾಗ, ಸೋಂಕಿತರೊಂದಿಗೆ ನಿಕಟ ಸಂಪರ್ಕದಲ್ಲಿರುವಾಗ, ಹಸ್ತಲಾಘವ ಮತ್ತು ಮುಟ್ಟುವಾಗ, ಸೋಂಕಿತ ವ್ಯಕ್ತಿಯು ಬಳಸಿದ ವಸ್ತುಗಳನ್ನು ಯಾವುದೇ ರಕ್ಷಣೆ ಇಲ್ಲದೆ ಬಳಸಿದಾಗ, ಸ್ವಚ್ಚಗೊಳಿಸದ/ ಸುರಕ್ಷಿತವಲ್ಲದ ಕೈಗಳಿಂದ ಕಣ್ಣು, ಮೂಗು, ಬಾಯಿ ಮುಟ್ಟುವುದರಿಂದ ಕೊರೊನಾ ವೈರಸ್ ಹರಡಲಿದ್ದು, ಈ ಬಗ್ಗೆ ಅಗತ್ಯ ಎಚ್ಚರ ವಹಿಸಬೇಕಿದೆ ಎಂದರು.
ಜ್ವರ, ತಲೆನೋವು, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ, ನ್ಯುಮೋನಿಯಾ ಹಾಗೂ ಭೇಧಿ ನೋವೆಲ್ ಕೊರೊನ ವೈರಸ್ನ ಲಕ್ಷಣಗಳಾಗಿದೆ ಎಂದು ಅವರು ಮಾಹಿತಿ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರ್ಸಿಎಚ್ ಅಧಿಕಾರಿ ಡಾ.ಗೋಪಿನಾಥ್ ಅವರು ಪವರ್ ಪಾಯಿಂಟ್ ಮೂಲಕ ಮಾಹಿತಿ ನೀಡಿ ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕಿದೆ. ಆ ನಿಟ್ಟಿನಲ್ಲಿ ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವುದು, ವಿಶೇಷವಾಗಿ ಆಗಾಗ್ಗೆ ಸಾಬೂನಿನಿಂದ ಕೈ ತೊಳೆದುಕೊಳ್ಳುವುದು, ಕೆಮ್ಮುವಾಗ ಮತ್ತು ಸೀನುವಾಗ ಮಾಸ್ಕ್ ಅಥವಾ ಕೈವಸ್ತ್ರ ಉಪಯೋಗಿಸುವುದು, ಸಾರ್ವಜನಿಕ ಸ್ಥಳಗಳಲ್ಲಿ ಉಗುಳಬಾರದು, ಉಸಿರಾಟ ತೊಂದರೆಯಾದಲ್ಲಿ ತಕ್ಷಣ ವೈದ್ಯರ ಸಲಹೆ ಪಡೆಯುವಂತಾಗಬೇಕು ಎಂದರು.
ಕೊರೊನಾ ವೈರಸ್ ಸೋಂಕಿದ ವ್ಯಕ್ತಿಗೆ ಅತಿಸಾರ, ಶೀತ, ಜ್ವರ ಮತ್ತು ಉಸಿರಾಟದ ಸಮಸ್ಯೆಗಳು ಇರುತ್ತವೆ. ಇದಕ್ಕೆ ನಿರ್ದಿಷ್ಟವಾದ ಚಿಕಿತ್ಸೆ ಎಂಬುದಿಲ್ಲ. ಆದರೆ ಲಕ್ಷಣಾಧಾರಿತ ವಾಗಿ ಚಿಕಿತ್ಸೆ ದೊರೆಯಲಿದೆ ಎಂದು ತಿಳಿಸಿದರು.
ಹಲವು ರೀತಿಯ ವೈರಸ್ಗಳು ಮನುಷ್ಯನ ದೇಹಕ್ಕೆ ಪ್ರವೇಶ ಮಾಡುತ್ತವೆ. ಅದರಲ್ಲಿ ಕೊರೊನಾ ವೈರಸ್ ಒಂದಾಗಿದೆ. ವೈರಸ್ಗಳು ದೇಹದಲ್ಲಿ ಬದುಕಲು ಪ್ರಯತ್ನಿಸುತ್ತವೆ. ಅದೇ ರೀತಿ ಕೊರೊನಾ ಸಹ ಒಂದು ವೈರಸ್ ಆಗಿದ್ದು, ಇದು ಬೇಗ ಹರಡುತ್ತದೆ. ಸೀನುವಾಗ, ಕೆಮ್ಮುವಾಗ ಕರವಸ್ತ್ರ ಇಟ್ಟುಕೊಳ್ಳಬೇಕು ಎಂದು ಸಲಹೆ ಮಾಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಚ್ಚಾಡೋ ಅವರು ಮಾತನಾಡಿ ಶಾಲೆಗಳಲ್ಲಿ ಕೊರೊನಾ ವೈರಸ್ ಬಗ್ಗೆ ಮಾಹಿತಿ ನೀಡಬೇಕು. ಶುಚಿತ್ವಕ್ಕೆ ಒತ್ತು ನೀಡಬೇಕು ಎಂದರು.
ಏಳನೇ ತರಗತಿ ಸಾಮಾನ್ಯ ಮೌಲ್ಯಾಂಕ ಪರೀಕ್ಷೆ, ಶಾಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಇಕೋ ಕ್ಲಬ್ ಚಟುವಟಿಕೆ, ಶಿಕ್ಷಣ ಹಕ್ಕು ಕಾಯ್ದೆ ಅನುಷ್ಠಾನ, ಶಾಲಾ ದಾಖಲಾತಿ ಹೆಚ್ಚಳ ಮತ್ತಿತರ ಬಗ್ಗೆ ಹಲವು ಮಾಹಿತಿ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್. ಗಾಯತ್ರಿ, ಕ್ಷೇತ್ರ ಸಂಪನ್ಮೂಲ ಅಧಿಕಾರಿ ರಂಜಿತ್, ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಎಂ. ಕೃಷ್ಣಪ್ಪ ಇತರರು ಇದ್ದರು