ಚೆಟ್ಟಳ್ಳಿ, ಮಾ. 11: ಗುಣಮಟ್ಟದ ಆಹಾರ ಸೇವನೆಯೊಂದಿಗೆ ಸ್ವಚ್ಛ ಪರಿಸರದಲ್ಲಿ ಶುಚಿತ್ವ ಕಾಪಾಡಿ ಕೊಳ್ಳುವ ಮೂಲಕ ಪ್ರತಿಯೊಬ್ಬರು ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಲಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಲೀಲಾವತಿ ಅಭಿಪ್ರಾಯ ವ್ಯಕ್ತಪಡಿಸಿದರು.

ಒಡಿಪಿ ಸಂಸ್ಥೆ, ಕಾರಿತಾಸ್ ಇಂಡಿಯಾ, ಅಪೋಲೋ ಆಸ್ಪತ್ರೆ ಹಾಗೂ ಮಾಲ್ದಾರೆ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಕಲ್ಲಳ್ಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಕ್ಯಾನ್ಸರ್ ರೋಗದ ವಿರುದ್ಧ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಕಳೆದ ಹಲವು ವರ್ಷಗಳಿಂದ ಒಡಿಪಿ ಸಂಸ್ಥೆಯು ಜಿಲ್ಲೆಯಲ್ಲಿ ಮಹಿಳೆಯರನ್ನು ಒಗ್ಗೂಡಿಸಿ ಸ್ವಾವಲಂಬಿ ಬದುಕಿನತ್ತ ಮಾರ್ಗದರ್ಶನ ನೀಡುತ್ತಿದೆ.

ವಿವಿಧ ಸಂಘ ಸಂಸ್ಥೆಗಳು ಹಾಗೂ ಆರೋಗ್ಯ ಇಲಾಖೆ ಹಲವಾರು ತಪಾಸಣಾ ಶಿಬಿರಗಳನ್ನು ಆಯೋಜಿಸುತ್ತಿದ್ದು. ಪ್ರತಿಯೊಬ್ಬರು ಇಂಥಹ ಶಿಬಿರಗಳಲ್ಲಿ ಭಾಗವಹಿಸುವ ಮೂಲಕ ಪ್ರಯೋಜನ ಪಡೆದುಕೊಂಡು ಆರೋಗ್ಯವಂತರಾಗಿ ಮುನ್ನಡೆಯಬೇಕೆಂದರು. ಮಾಲ್ದಾರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಣಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ಶ್ರಂಗಶ್ರೀ, ಮೈಸೂರು ಅಪೋಲೋ ಆಸ್ಪತ್ರೆಯ ಡಾ. ಸಚಿನ್, ಡಾ. ಭಾರತಿ, ಡಾ. ಆನಂದ್, ಮಾಲ್ದಾರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜೇಶ್, ಮಹಿಳೋದಯ ಮಹಿಳಾ ಒಕ್ಕೂಟ (ಒಡಿಪಿ) ಸಂಸ್ಥೆಯ ಜಿಲ್ಲಾ ಸಂಯೋಜಕಿ ಜಾಯ್ಸ್ ಮೆನೇಜಸ್,ಕಾರ್ಯಕರ್ತೆ ವಿಜಯ ನಾರಾಯಣ, ಗ್ರಾಮ ಪಂಚಾಯಿತಿ ಸದಸ್ಯ ಸತೀಶ್, ಆರೋಗ್ಯ ಇಲಾಖೆಯ ಸುದರ್ಶನ್ ಸೇರಿದಂತೆ ಮತ್ತಿತರರು ಹಾಜರಿದ್ದರು.