ಮಡಿಕೇರಿ, ಮಾ. 12: ಅಡುಗೆ ಮಾಡುವುದು, ಮಕ್ಕಳನ್ನು ನೋಡಿಕೊಳ್ಳುವುದು ಸೇರಿದಂತೆ ಕುಟುಂಬದ ಕೆಲಸಕ್ಕೆ ಗೌರವ ನೀಡಬೇಕು. ನಮ್ಮ ನಮ್ಮ ಕೆಲಸವನ್ನು ಮೊದಲು ಗೌರವಯುತವಾಗಿ ಕಾಣಬೇಕು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸಲಹೆ ಮಾಡಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸ್ಕೌಟ್ಸ್ ಮತ್ತು ಗೈಡ್ಸ್ ಸಹಕಾರದಲ್ಲಿ ನಗರದ ಡಿ.ದೇವರಾಜ ಅರಸು ಭವನದಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ನಡೆದ ಪೋಷಣ್ ಅಭಿಯಾನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮಹಿಳೆಯರು ಕುಟುಂಬ ನಿರ್ವಹಣೆ ಜೊತೆಗೆ ಆರೋಗ್ಯದ ಕಡೆಯೂ ಹೆಚ್ಚಿನ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ನೀಡಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಅರುಂಧತಿ ಮಾತನಾಡಿ ಮಹಿಳೆಯರು ಯಾವುದಕ್ಕೂ ಕಡಿಮೆ ಇಲ್ಲ ಎಂಬಂತೆ ಅಡುಗೆ ಮನೆಯಿಂದ ಅಂತರಿಕ್ಷದವರೆಗೆ ಸಾಧನೆಯ ಶಿಖರವನ್ನೇರಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ ಎಂದರು.
ಕ್ರೀಡೆಯಲ್ಲಿ ಸಾಧನೆ ಮಾಡಿದ ತಾತಪಂಡ ಜ್ಯೋತಿ ಸೋಮಯ್ಯ ಮತ್ತು ವಿಶಾಲಾಕ್ಷಿ ವೈ.ಎನ್ ಹಾಗೂ ಅಂಗನವಾಡಿ ಸಹಾಯಕಿಯರು ಹಾಗೂ ಕಾರ್ಯಕರ್ತೆಯರಾದ ಮಹಾಲಕ್ಷ್ಮಿ ಸಿ.ಎ., ಲೀಲಾ ಎಂ.ಬಿ., ಪೂರ್ಣಿಮಾ ಕುಮಾರಿ, ನಳಿನಾಕ್ಷಿ, ರತಿ ಎ.ಎಂ., ಕೋಟಿ ತ್ರೇಶಾ ಅವರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರವೀಂದ್ರ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಆಯುಕ್ತರಾದ ಜಿಮ್ಮಿ ಸಿಕ್ವೇರ, ಸುರೇಶ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಸವಿತಾ, ಜಯಂತಿ, ಮಾತೃ ವಂದನಾ ಮತ್ತು ಪೋಷಣ್ ಅಭಿಯಾನದ ಜಿಲ್ಲಾ ಸಂಯೋಜಕರಾದ ಕೆ.ಎಚ್. ಪ್ರಭಾವತಿ, ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು, ಸ್ತ್ರೀ ಶಕ್ತಿ ಸಂಘದ ಸದಸ್ಯರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕರಾದ ಸತ್ಯಭಾಮ ನಿರೂಪಿಸಿದರು, ಅಂಗನವಾಡಿ ಕಾರ್ಯಕರ್ತೆ ದೇವಕಿ ಪ್ರಾರ್ಥಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಲ್ಲಾ ಸಂಯೋಜಕರಾದ ದಮಯಂತಿ ಸ್ವಾಗತಿಸಿದರು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೋಭಾ ವಂದಿಸಿದರು.