ಕುಶಾಲನಗರ, ಮಾ 12: ಕುಶಾಲನಗರ ಮತ್ತು ಪೊನ್ನಂಪೇಟೆ ನೂತನ ತಾಲೂಕುಗಳ ರಚನೆಯ ಹಿನ್ನೆಲೆಯಲ್ಲಿ ಸಂಪೂರ್ಣ ಮಾಹಿತಿ ಗಳನ್ನು ಒಳಗೊಂಡ ವರದಿಯನ್ನು ಸರಕಾರಕ್ಕೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಅವರು ಕುಶಾಲನಗರಕ್ಕೆ ಭೇಟಿ ನೀಡಿದ ಸಂದರ್ಭ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದು ಕುಶಾಲನಗರ ನೂತನ ತಾಲೂಕು ರಚನೆ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆಯಲ್ಲಿ ಚರ್ಚೆಯಾದಂತೆ ವರದಿಯನ್ನು ಸಲ್ಲಿಸಲಾಗಿದ್ದು ಸುಂಟಿಕೊಪ್ಪ ಹೋಬಳಿಯ ಕೆಲವು ಭಾಗಗಳನ್ನು ವಿಂಗಡಣೆ ಮಾಡಲು ತಾಂತ್ರಿಕ ಸಮಸ್ಯೆಗಳು ಇರುವ ಹಿನ್ನೆಲೆಯಲ್ಲಿ ತೊಡಕು ಉಂಟಾಗಿದೆ ಹೊರತು ಇನ್ಯಾವುದೇ ರೀತಿಯ ಸಮಸ್ಯೆ ತಲೆದೋರಿಲ್ಲ ಎಂದು ಸ್ಪಷ್ಟಪಡಿಸಿದರು.

ಗಡಿ ಗುರುತು ಮಾಡಿ ನಕ್ಷೆ ಸೇರಿದಂತೆ ಎಲ್ಲಾ ವಿವರಗಳನ್ನು ಸರಕಾರಕ್ಕೆ ಸಲ್ಲಿಸಲಾಗಿದೆ. ಜಿಲ್ಲಾಡಳಿತದಿಂದ ಯಾವುದೇ ರೀತಿಯ ಲೋಪ ಉಂಟಾಗಿಲ್ಲ ಎಂದು ಅವರು ತಿಳಿಸಿದ್ದಾರೆ.