ಮಡಿಕೇರಿ, ಮಾ.14: ಇತ್ತೀಚೆಗೆ ಗೋಣಿಕೊಪ್ಪ ಕಳತ್ಮಾಡುವಿನ ಲಯನ್ಸ್ ಪ್ರೌಢಶಾಲೆಯ ವಿದ್ಯಾರ್ಥಿಗಳು ದುಬಾರೆಗೆ ಪ್ರವಾಸ ತೆರಳಿದ್ದ ಸಂದರ್ಭದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಈ ಸಂಬಂಧ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರ ವಿರುದ್ಧ ಕರ್ನಾಟಕ ಶಿಕ್ಷಣ ಸಂಸ್ಥೆ ಕಾಯ್ದೆ ಪ್ರಕಾರ ಆಡಳಿತ ಮಂಡಳಿಯು ಒಂದು ವಾರದೊಳಗೆ ಅಗತ್ಯ ಕ್ರಮ ಕೈಗೊಂಡು ವರದಿ ನೀಡಬೇಕು. ಇಲ್ಲದಿದ್ದಲ್ಲಿ ಆಡಳಿತ ಮಂಡಳಿ ವಿರುದ್ಧ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಎಚ್ಚರಿಕೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತಾ. 13ರಂದು ನಡೆದ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗೋಣಿಕೊಪ್ಪ ಲಯನ್ಸ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರವಾಸ ಕೈಗೊಂಡಿರುವ ಸಂಬಂಧ ವರದಿ ನೀಡಲು ಸೂಚಿಸಲಾಗಿತ್ತು, ಆದರೆ ಸಂಸ್ಥೆಯವರು ಸಮರ್ಪಕ ಮಾಹಿತಿ ಒದಗಿಸಿಲ್ಲ. ಆದ್ದರಿಂದ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರ ವಿರುದ್ಧ ನಿಯಮಾನುಸಾರ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ಸಂಸ್ಥೆಯ ವಿರುದ್ಧ ಸರ್ಕಾರಕ್ಕೆ ವರದಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪಿ.ಎಸ್.ಮಚ್ಚಾಡೋ ಮಾತನಾಡಿ ಶೈಕ್ಷಣಿಕ ಪ್ರವಾಸವನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಬೇಕಿತ್ತು, ಜೊತೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಅವರಿಂದ ಅನುಮತಿ ಪಡೆದಿರುವುದಿಲ್ಲ. ಪೋಷಕರ ಅನುಮತಿಯನ್ನೂ ಸಹ ಪಡೆದಿಲ್ಲ ಎಂದು ತಿಳಿಸಿದರು.
ಮೃತಪಟ್ಟ ಇಬ್ಬರು ವಿದ್ಯಾರ್ಥಿಗಳ ಕುಟುಂಬಕ್ಕೆ ವಿದ್ಯಾರ್ಥಿ ಕಲ್ಯಾಣ ನಿಧಿಯಿಂದ ತಲಾ ಒಂದು ಲಕ್ಷ ರೂ.ವನ್ನು ನೀಡಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಪಿ.ಎಸ್. ಮಚ್ಚಾಡೋ ತಿಳಿಸಿದರು.
ಶುಲ್ಕ ಬಗ್ಗೆ ಮಾಹಿತಿ ನೀಡಿ: ಮುಂದಿನ ಶೈಕ್ಷಣಿಕ ವರ್ಷದಿಂದ ಖಾಸಗಿ ಮತ್ತು ಅನುದಾನಿತ ಶಾಲೆಗಳಿಗೆ ವಿದ್ಯಾರ್ಥಿ ಪ್ರವೇಶ ಶುಲ್ಕ ಸಂಬಂಧಿಸಿದಂತೆ ಸೂಚನಾ ಫಲಕದಲ್ಲಿ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಸಿಬಿಎಸ್‍ಇ, ಐಸಿಐಸಿ ಸೇರಿದಂತೆ ವಿವಿಧ ಖಾಸಗಿ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅನುಷ್ಠಾನ ಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಮಳೆಗಾಲದಲ್ಲಿ ಶಾಲೆಗಳ ಸುರಕ್ಷತೆ ಸಂಬಂಧಿಸಿದಂತೆ ಈಗಲೇ ಅಗತ್ಯ ಕ್ರಮಕೈಗೊಳ್ಳಬೇಕು. ಶಾಲೆಗಳ ಸುಸ್ಥಿತಿ ಸಂಬಂಧಿಸಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳೇ ಜವಾಬ್ದಾರಿ ಹೊರಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶಿವಲಿಂಗಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೀಳಗಿ, ಗಾಯತ್ರಿ, ಪಾಂಡು, ದೈಹಿಕ ಶಿಕ್ಷಣಾಧಿಕಾರಿ ವೆಂಕಟೇಶ್ ಇತರರು ಇದ್ದರು.