ಸಿದ್ದಾಪುರ, ಮಾ.18: ಗಲ್ಫ್ನಿಂದ ಬಂದ ಸಿದ್ದಾಪುರದ ವ್ಯಕ್ತಿಯೋರ್ವರಲ್ಲಿ ಕೊರೊನಾ ಪತ್ತೆಯಾಗಿದ್ದು, ಅವರನ್ನು ಪೊಲೀಸರು ಅರೆಸ್ಟ್ ಮಾಡಿ ಮಡಿಕೇರಿಗೆ ಕರೆದುಕೊಂಡು ಹೋಗಿದ್ದಾರೆ. ಎಲ್ಲರೂ ಅಲರ್ಟ್ ಆಗಿರಿ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಪರಿಣಾಮ ಸಿದ್ದಾಪುರ ಸುತ್ತಮುತ್ತಲಿನ ಜನರು ಭಯಭೀತರಾಗಿದ್ದಾರೆ.
ಆದರೆ ಸಿದ್ದಾಪುರದಲ್ಲಿ ಇಂತಹ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಕೊರೊನಾ ಬಗ್ಗೆ ತಪ್ಪು ಸಂದೇಶವನ್ನು ಪ್ರಚಾರ ಮಾಡುವ ಮೂಲಕ ಜನರಲ್ಲಿ ಭೀತಿ ಹುಟ್ಟಿಸಿರುವ ವ್ಯಕ್ತಿಯನ್ನು ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಗ್ರಾಮ ಪಂಚಾಯತಿ ಸದಸ್ಯ ಎ.ಎಸ್ ಹುಸೈನ್ ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.