ಮಡಿಕೇರಿ, ಮಾ. 17: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಡಿ.ಕೆ. ಶಿವಕುಮಾರ್ ಅವರನ್ನು ಕೆಪಿಸಿಸಿ ಮಾಜಿ ಉಪಾಧ್ಯಕ್ಷರಾದ, ಜಿಲ್ಲಾ ಕಾಂಗ್ರೆಸ್‍ನ ಹಿರಿಯ ಮುಖಂಡ ಬಿ.ಜಿ. ಮಿಟ್ಟು ಚಂಗಪ್ಪ ಅವರು ಬೆಂಗಳೂರಿನಲ್ಲಿ ಭೇಟಿ ಮಾಡಿ ಚರ್ಚಿಸಿದರು.
ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದ ಅವರು, ಕಾಂಗ್ರೆಸ್ ಪಕ್ಷವನ್ನು ಪುನರ್ ಸಂಘಟನೆಗೊಳಿಸುವ ನಿಟ್ಟಿನಲ್ಲಿ ಚರ್ಚೆ ನಡೆಸಿ ಜಿಲ್ಲೆಗೂ ಭೇಟಿ ನೀಡುವಂತೆ ಆಹ್ವಾನಿಸಿದ್ದಾರೆ. ಅಧಿಕಾರ ಸ್ವೀಕಾರದ ಬಳಿಕ ಜಿಲ್ಲೆಗೆ ಭೇಟಿ ನೀಡುವುದಾಗಿ ಅವರು ತಿಳಿಸಿದ್ದಾರೆ.
ಪಕ್ಷದಲ್ಲಿ ಹಿರಿಯ ಮುಖಂಡರನ್ನು ಅವರ ಅಭಿಪ್ರಾಯ, ಸಲಹೆಗಳನ್ನು ಪಡೆದು ಯುವಕರನ್ನೂ ಸೇರಿಸಿಕೊಂಡು ಪಕ್ಷ ಸಂಘಟನೆ ಮಾಡುವ ಇಂಗಿತವನ್ನು ಅವರು ವ್ಯಕ್ತಪಡಿಸಿದ್ದಾಗಿ ಮಿಟ್ಟು ಚಂಗಪ್ಪ ತಿಳಿಸಿದ್ದಾರೆ.
ತಾ. 20 ರಂದು ಸಭೆ
ನೂತನ ಅಧ್ಯಕ್ಷರಾದ ಡಿ.ಕೆ.ಶಿ. ಅವರು ತಾ. 20 ರಂದು ಬೆಂಗಳೂರಿನಲ್ಲಿ ಎಲ್ಲಾ ಹಿರಿಯ ಕಾಂಗ್ರೆಸ್ಸಿಗರ ಹಾಗೂ ವಿವಿಧ ಪ್ರಮುಖ ಘಟಕಗಳ ಪದಾಧಿಕಾರಿಗಳ ಸಭೆಯನ್ನು ಕರೆದಿದ್ದಾರೆ ಎಂದು ಮಿಟ್ಟು ತಿಳಿಸಿದ್ದಾರೆ.