ಗೋಣಿಕೊಪ್ಪಲು, ಮಾ. 18 : ಕುಟ್ಟ ಸಮೀಪದ ಮಂಚಳ್ಳಿ ಗ್ರಾಮದಲ್ಲಿರುವ ಬ್ರಹ್ಮಗಿರಿ ಬೆಟ್ಟದ ಅರಣ್ಯ ಪ್ರದೇಶ ದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅರಣ್ಯ ಇಲಾಖೆ ಯ ಅಧಿಕಾರಿ ಗಳು ಹಾಗೂ ಕುಟ್ಟ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಬುಧವಾರ ಮಧ್ಯಾಹ್ನದ ವೇಳೆ ಅರಣ್ಯದಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅರಣ್ಯ ಸಿಬ್ಬಂದಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಪ್ರಯತ್ನ ನಡೆಸಿದರು.

ವಿಪರೀತ ಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಬಿಸಿಲಿನ ಬೇಗೆ ಹೆಚ್ಚಾಗಿ ಇರುವುದರಿಂದ ಬೆಂಕಿ ಹತೋಟಿಗೆ ತರಲು ಸಿಬ್ಬಂದಿಗಳು ಶ್ರಮಿಸುತ್ತಿದ್ದಾರೆ. ಈಗಾಗಲೇ 30 ಎಕರೆಗೂ ಮೀರಿ ಬ್ರಹ್ಮಗಿರಿ ಬೆಟ್ಟದ ಅರಣ್ಯ ಪ್ರದೇಶದಲ್ಲಿರುವ ಗಿಡ, ಮರಗಳು ಸುಟ್ಟು ಕರಕಲಾಗಿವೆ.

ಅರಣ್ಯ ಸಮೀಪದ ಕಾಫಿ ತೋಟದ ಬಳಿಯಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳದಲ್ಲಿ ಅರಣ್ಯ ಇಲಾಖೆಯ ಡಿಎಫ್‍ಓ ಶಿವಯ್ಯ, ಎಸಿಎಫ್ ದಯಾನಂದ್, ಅರ್.ಎಫ್.ಓ. ವೀರೇಂದ್ರ ಹಾಗೂ ಅನೇಕ ಸಿಬ್ಬಂದಿಗಳು, ಕುಟ್ಟ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಪರಶಿವಮೂರ್ತಿ, ಠಾಣಾಧಿಕಾರಿ ಗಳು, ಸಿಬ್ಬಂದಿಗಳು ಮೊಕ್ಕಾಂ ಹೂಡಿದ್ದು, ಬೆಂಕಿಯನ್ನು ತಹ ಬದಿಗೆ ತರುವ ಪ್ರಯತ್ನದಲ್ಲಿ ತೊಡಗಿದ್ದಾರೆ.

- ಹೆಚ್.ಕೆ. ಜಗದೀಶ್