ಮಡಿಕೇರಿ, ಮಾ. 18 : 2018ರಲ್ಲಿ ಉಂಟಾದ ಪ್ರಕೃತಿ ವಿಕೋಪದಿಂದಾಗಿ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಲಾಗಿದ್ದು, ಈ ಮನೆಗಳನ್ನು ಕೂಡಲೇ ಹಸ್ತಾಂತರಿಸಬೇಕಿದೆ. ಆ ನಿಟ್ಟಿನಲ್ಲಿ ಮನೆ ಹಸ್ತಾಂತರಿಸಲು ನಿಖರ ಪಟ್ಟಿ ಒದಗಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಪ್ರಕೃತಿ ವಿಕೋಪದಿಂದಾಗಿ ಮನೆ ಕಳೆದುಕೊಂಡವರಿಗೆ ಪುನರ್ ವಸತಿ ಕಲ್ಪಿಸಬೇಕಿದ್ದು, ಈ ಹಿನ್ನೆಲೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಹೇಳಿದರು.

ಈ ಬಗ್ಗೆ ಮಾಹಿತಿ ನೀಡಿದ ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಅವರು ಮನೆ ಹಂಚಿಕೆ ಸಂಬಂಧಿಸಿದಂತೆ ಮೊದಲ ಹಂತದಲ್ಲಿ ಮನೆಗಳ ಆಯ್ಕೆ ಮಾಡಲಾಗಿದೆ. ಎರಡನೇ ಹಂತದಲ್ಲಿ ಕೆಲವು ಕುಟುಂಬಳಿಗೆ ಮನೆ ಸಿಕ್ಕಿಲ್ಲ ಎಂಬ ದೂರುಗಳು ಕೇಳಿ ಬರುತ್ತಿದ್ದು, ಇದನ್ನು ಸರಿಪಡಿಸಬೇಕಿದೆ ಎಂದು ಹೇಳಿದರು.

ಮನೆ ಹಂಚಿಕೆ ಸಂಬಂಧಿಸಿದಂತೆ ದೂರುಗಳು ಕೇಳಿ ಬರುತ್ತಿದ್ದು, ಕೊರೊನಾ ವೈರಸ್ ನಿಯಂತ್ರಣಕ್ಕೆ ಬಂದ ನಂತರ ದೂರುಗಳನ್ನು ಸರಿಪಡಿಸಿ ಮನೆಗಳ ಹಂಚಿಕೆ ಸಂಬಂಧ ಸಮರ್ಪಕ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಅರ್ಹರ ಹೆಸರು ಬಿಟ್ಟು ಹೋಗಿದ್ದಲ್ಲಿ ಸೇರ್ಪಡೆ ಮಾಡುವಂತೆ ಅವರು ಸೂಚಿಸಿದರು. ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ ಇತರರು ಇದ್ದರು.