ಮಡಿಕೇರಿ, ಮಾ. 30: ಕೊರೊನಾ ಸಂಬಂಧ ಜಿಲ್ಲೆಯಿಂದ ವಿದೇಶಗಳಿಗೆ ಹೋಗಿ ಹಿಂತಿರುಗಿ ಬಂದಿರುವವರನ್ನು ಪತ್ತೆಹಚ್ಚಿ ತಪಾಸಣೆ ಮಾಡುವ ಕಾರ್ಯವನ್ನು ಮುಂದುವರೆಸಲಾಗಿದೆ. ಅದರಂತೆ ಇಂದು ಸಂಜೆಯವರೆಗೆ ಮಡಿಕೇರಿ ತಾಲೂಕಿನಲ್ಲಿ 145, ವೀರಾಜಪೇಟೆ ತಾಲೂಕಿನಲ್ಲಿ 116 ಮತ್ತು ಸೋಮವಾರಪೇಟೆ ತಾಲೂಕಿನಲ್ಲಿ 118 ಜನರನ್ನು ಪತ್ತೆಹಚ್ಚಲಾಗಿದೆ. ಈ ಪೈಕಿ 359 ಜನರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಅವರವರ ಮನೆಗಳಲ್ಲಿಯೇ ಸಂಪರ್ಕ ತಡೆಯನ್ನು ಮಾಡಲಾಗಿದೆ.
ಇಲ್ಲಿಯವರೆಗೆ ಒಟ್ಟು 46 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಅದರಲ್ಲಿ 1 ಪ್ರಕರಣ ದೃಢ ಪಟ್ಟಿದ್ದು, 45 ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿದೆ. ಪ್ರಸ್ತುತ ಸೋಂಕು ದೃಢಪಟ್ಟ 1 ಪ್ರಕರಣ ಸೇರಿದಂತೆ ಒಟ್ಟು 4 ಪ್ರಕರಣಗಳನ್ನು ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕ ಕೊಠಡಿಯಲ್ಲಿಟ್ಟು ಉಪಚರಿಸಲಾಗುತ್ತಿದೆ.
ಇಂದು ಅಪರಾಹ್ನ ಜಿಲ್ಲೆಯ ತಹಶೀಲ್ದಾರರು, ಕಾರ್ಯನಿರ್ವಹಣಾಧಿಕಾರಿಗಳು ಮತ್ತಿತರ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ನಡೆಸಿ ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಸಂಬಂಧ ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಬಂದಿರುವ ಜನರ ಮಾಹಿತಿಯನ್ನು ಕ್ರೋಢೀಕರಿಸಿ ತುರ್ತಾಗಿ ಸಲ್ಲಿಸಲು ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.