ಸೋಮವಾರಪೇಟೆ, ಏ. 3: ತಾಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಮಾರಕ ಕೊರೊನಾ ವೈರಸ್ ಸೋಂಕಿನ ವಿರುದ್ಧ ಸಾರ್ವ ಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ಚಾಲನೆ ನೀಡಲಾಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಹಿರಿಯ ಸಿವಿಲ್ ನ್ಯಾಯಾಧೀಶ ಎಸ್.ಆರ್. ದಿಂಡಲಕೊಪ್ಪ ಅವರು, ವಿಶ್ವದಾದ್ಯಂತ ಮಾರಕವೆನಿಸಿರುವ ಕೊರೊನಾ ವೈರಸ್ ಬಗ್ಗೆ ಸಾರ್ವಜನಿಕರು ಹೆಚ್ಚಿನ ಜಾಗ್ರತೆ ವಹಿಸಬೇಕು. ಸರ್ಕಾರ ಮತ್ತು ಆರೋಗ್ಯ ಇಲಾಖೆ ಸೂಚಿಸುವ ಆದೇಶಗಳನ್ನು ಪಾಲಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ವೈರಸ್ ಹರಡದಂತೆ ನಿಗಾವಹಿಸಬೇಕು ಎಂದರು. ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಪ್ರತಿಭಾ, ತಾಲೂಕು ತಹಶೀಲ್ದಾರ್ ಗೋವಿಂದರಾಜು, ಪೊಲೀಸ್ ವೃತ್ತ ನಿರೀಕ್ಷಕ ನಂಜುಂಡೇಗೌಡ, ಠಾಣಾಧಿಕಾರಿ ಶಿವಶಂಕರ್, ವಕೀಲರ ಸಂಘದ ಅಧ್ಯಕ್ಷ ಡಿ.ಕೆ. ತಿಮ್ಮಯ್ಯ ಅವರುಗಳು ಉಪಸ್ಥಿತರಿದ್ದರು. ಆಟೋದಲ್ಲಿ ಧ್ವನಿ ವರ್ಧಕ ಅಳವಡಿಸಿ ಪಟ್ಟಣ ಸೇರಿದಂತೆ ಸಮೀಪದ ಗ್ರಾಮೀಣ ಭಾಗದಲ್ಲಿ ಕೊರೊನಾ ವೈರಸ್ ಬಗ್ಗೆ ಜಾಗೃತಿಯ ಸಂದೇಶ ರವಾನಿಸಲಾಯಿತು.