ಸೋಮವಾರಪೇಟೆ, ಏ.11: ಕೊರೊನಾ ವೈರಸ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿರುವ ಸೋಮವಾರಪೇಟೆ ವ್ಯಾಪ್ತಿಯ ಪೊಲೀಸ್ ಸಿಬ್ಬಂದಿಗಳಿಗೆ ವೈದ್ಯರುಗಳ ತಂಡದಿಂದ ಆರೋಗ್ಯ ತಪಾಸಣೆ ನಡೆಸಲಾಯಿತು.

ಸ್ಥಳೀಯ ಕೊಡವ ಸಮಾಜದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸೋಮವಾರಪೇಟೆಯ ಪೊಲೀಸ್ ವೃತ್ತ ನಿರೀಕ್ಷಕ ನಂಜುಂಡೇಗೌಡ, ಪೊಲೀಸ್ ಠಾಣಾಧಿಕಾರಿ ಶಿವಶಂಕರ್ ಸೇರಿದಂತೆ ಪೊಲೀಸ್ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿಗಳಿಗೆ ವೈದ್ಯರು ಗಳಾದ ಮಡಿಕೇರಿಯ ಡಾ. ಬಿ.ಸಿ. ನವೀನ್ ಕುಮಾರ್, ಮೆಡಿಕಲ್ ಕಾಲೇಜಿನ ಡಾ. ತೇಜಸ್, ಡಾ. ಕಿರಣ್, ಡಾ. ಪುರುಷೋತ್ತಮ್ ಅವರುಗಳು ರಕ್ತ ಪರೀಕ್ಷೆ, ರಕ್ತದೊತ್ತಡ ಸೇರಿದಂತೆ ಇತರ ಸಾಮಾನ್ಯ ಪರೀಕ್ಷೆಗಳನ್ನು ಉಚಿತವಾಗಿ ನಡೆಸಿದರು.

ಈ ಸಂದರ್ಭ ಮಾತನಾಡಿದ ಡಾ. ನವೀನ್‍ಕುಮಾರ್, ದಿನದ 24 ಗಂಟೆಯೂ ಒತ್ತಡದಲ್ಲಿಯೇ ಕಾರ್ಯನಿರ್ವಹಿಸುವ ಪೊಲೀಸರು ತಮ್ಮ ಆರೋಗ್ಯದ ಬಗ್ಗೆ ನಿಗಾವಹಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆ ಪೊಲೀಸ್ ಸಿಬ್ಬಂದಿಗಳ ಆರೋಗ್ಯ ತಪಾಸಣೆ ನಡೆಸಲಾಗಿದ್ದು, ಕೊರೊನಾ ಸಂಬಂಧಿತ ಲಕ್ಷಣಗಳು ಕಂಡುಬಂದಲ್ಲಿ ಆರೋಗ್ಯ ಇಲಾಖೆಯ ಮೇಲಧಿಕಾರಿಗಳಿಗೆ ಮಾಹಿತಿ ನೀಡಿ ಹೆಚ್ಚಿನ ಚಿಕಿತ್ಸೆಗೆ ಒಳಪಡಿಸಲಾಗುವದು. ಸದ್ಯದ ಮಟ್ಟಿಗೆ ಯಾವದೇ ಸಿಬ್ಬಂದಿಗಳಿಗೆ ಅಂತಹ ಲಕ್ಷಣ ಇಲ್ಲ. ಎಲ್ಲರ ಆರೋಗ್ಯವೂ ಸ್ಥಿರವಾಗಿದೆ ಎಂದರು.