ಕುಶಾಲನಗರ, ಏ, 29: ಕಾವೇರಿ ನದಿ ಜಲಾನಯನ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಸುರಿದ ಹಿನ್ನಲೆಯಲ್ಲಿ ಕುಶಾಲನಗರ ವ್ಯಾಪ್ತಿಯಲ್ಲಿ ಹರಿಯುತ್ತಿರುವ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಏರಿಕೆ ಕಂಡಿದೆ. ಈ ಕಾರಣದಿಂದ ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಜನತೆಗೆ ಕುಡಿಯುವ ನೀರಿನ ಕೊರತೆ ನೀಗಿದಂತಾಗಿದೆ. ಕಳೆದ ಹಲವು ವರ್ಷಗಳಿಂದ ಏಪ್ರಿಲ್ ತಿಂಗಳ ವೇಳೆಗೆ ನದಿ ಬಹುತೇಕ ಬತ್ತಿ ಹೋಗುತ್ತಿದ್ದು ನೀರಿಗಾಗಿ ಪರದಾಡುವ ಸ್ಥಿತಿ ಎದುರಾಗುತ್ತಿತ್ತು. ಆದರೆ ಈ ಬಾರಿ ಯಾವುದೇ ರೀತಿಯ ಸಮಸ್ಯೆ ಕಂಡುಬಂದಿಲ್ಲ. ಬೈಚನಹಳ್ಳಿ ಪಂಪ್‍ಹೌಸ್ ಬಳಿ ಪ್ರತಿ ವರ್ಷ ಮರಳು ಚೀಲದ ಬಂಡ್ ನಿರ್ಮಿಸಿ ನದಿಯಲ್ಲಿ ನೀರು ಸಂಗ್ರಹ ಮಾಡಿ ಪಟ್ಟಣಕ್ಕೆ ಕುಡಿಯುವ ನೀರು ಒದಗಿಸಲಾಗುತ್ತಿತ್ತು. ಆದರೆ ಈ ಬಾರಿ ಇಂತಹ ಪ್ರಮೇಯ ಉಂಟಾಗಿಲ್ಲ ಎಂದು ಕುಶಾಲನಗರ ಜಲಮಂಡಳಿಯ ಅಧಿಕಾರಿ ಆನಂದ್ ತಿಳಿಸಿದ್ದಾರೆ.