ಮಡಿಕೇರಿ ಮೇ 7 : ಕೊಡಗು ಜಿಲ್ಲೆಯಲ್ಲಿ ಕಳೆದ 2 ವರ್ಷಗಳಿಂದ ಬಿದ್ದ ಭಾರಿ ಮಳೆಯಿಂದಾಗಿ ಜಿಲ್ಲೆಯಲ್ಲಿ ಉಂಟಾದ ರಸ್ತೆ, ಸೇತುವೆ, ತಡೆಗೋಡೆ ಮತ್ತು ಇತರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕೊಡಗು ಜಿಲ್ಲೆಗೆ ಜಿಲ್ಲಾಡಳಿತದ ವರದಿಯನ್ನು ಆಧರಿಸಿ ವಿಶೇಷ ಪ್ಯಾಕೇಜ್ ಎಂದು ರೂ. 536 ಕೋಟಿ ವನ್ನು ಕಳೆದ ವರ್ಷ ಜುಲೈನಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಇತರ ಅಧಿಕಾರಿಗಳ ಸಭೆಯಲ್ಲಿ ನಿರ್ಣಯಿಸಿ ಆದೇಶ ಹೊರಡಿಸಲಾಗಿತ್ತು.
ಈ ಹಿನ್ನೆಲೆ ಮೊದಲ ಕಂತಾಗಿ ರೂ. 100 ಕೋಟಿ ಹಣವನ್ನು ಲೋಕೋಪಯೋಗಿ ಇಲಾಖೆ, ಗ್ರಾಮೀಣಾಭಿವೃದ್ಧಿ, ಸಣ್ಣ ನೀರಾವರಿ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆ ವತಿಯಿಂದ ಕೈಗೆತ್ತಿಕೊಳ್ಳುವ ಕಾಮಗಾರಿಗಳಿಗೆ ಬಿಡುಗಡೆ ಮಾಡಲು ಸೂಚಿಸಲಾಗಿತ್ತು. ಅದರಂತೆ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಜಿಲ್ಲಾಧಿಕಾರಿ ಆಡಳಿತಾತ್ಮಕ ಒಪ್ಪಿಗೆ ನೀಡಿದ್ದು, ಈಗಾಗಲೇ ಗ್ರಾಮೀಣಾಭಿವೃದ್ಧಿ ಮತ್ತು ಲೋಕೋಪಯೋಗಿ ಇಲಾಖೆಗಳು ರಸ್ತೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಆದರೆ ಕಾಮಗಾರಿಗಳು ಪೂರ್ಣಗೊಂಡಿಲ್ಲ. ಮಳೆಗಾಲ ಆರಂಭವಾಗುವುದರ ಒಳಗೆ ಸ್ಥಗಿತಗೊಂಡಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕಿದೆ. ಇಲ್ಲದಿದ್ದಲ್ಲಿ ಮಳೆಗಾಲದಲ್ಲಿ ಅನೇಕ ಗ್ರಾಮಗಳಿಗೆ ಸಂಪರ್ಕ ಇಲ್ಲದಂತಾಗುತ್ತದೆ.
ಕೊಡಗು ಜಿಲ್ಲೆಗೆ ಈವರೆಗೆ ಎನ್‍ಡಿಆರ್‍ಎಫ್ ನಿಧಿಯಿಂದ ಕೇವಲ ರೂ. 10 ಕೋಟಿ ಮಾತ್ರ ಬಿಡುಗಡೆ ಮಾಡಲಾಗಿದೆ. ತಾವು 2020 ರ ಮಾರ್ಚ್ 11 ರಂದು ಮನವಿ ಪತ್ರಕ್ಕೆ ಸ್ಪಂದಿಸಿ ಮಾಡಿರುವ ಆದೇಶದಂತೆ ರೂ. 100 ಕೋಟಿ ತಕ್ಷಣ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಗೆ ಸೂಚಿಸುವಂತೆ ಮುಖ್ಯಮಂತ್ರಿಗಳಲ್ಲಿ ವೀರಾಜಪೇಟೆ ಶಾಸಕ ಕೆ.ಜಿ ಬೋಪಯ್ಯ ಮನವಿ ಮಾಡಿದ್ದಾರೆ.