ನವದೆಹಲಿ, ಮೇ 15: ಕೊರೊನಾ ವೈರಸ್ ಲಾಕ್‍ಡೌನ್ ಹಿನ್ನೆಲೆ ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ರೂ. 20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್‍ನ ಮೂರನೇ ಹಂತದ ಘೋಷಣೆಗಳ ವಿವರವನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೀಡುತ್ತಿದ್ದು, ಕೃಷಿ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 1 ಲಕ್ಷ ಕೋಟಿ ಮೀಸಲಿಡಲಾಗಿದೆ ಎಂದು ಹೇಳಿದ್ದಾರೆ.ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ದ್ದೇಶಿಸಿ ಮಾತನಾಡಿದ ನಿರ್ಮಲಾ ಸೀತಾರಾಮನ್ ಅವರು, ‘ಆರ್ಥಿಕ ಪ್ಯಾಕೇಜ್‍ನ ಮೂರನೇ ಕಂತಿನಲ್ಲಿ ಕೃಷಿ ಮತ್ತು ಕೃಷಿ ಸಂಬಂಧಿತ ವಿಷಯಗಳಿಗೆ ಆದ್ಯತೆ ನೀಡಲಾಗಿದೆ. ಕೃಷಿಗೆ ಸಂಬಂಧಿಸಿದಂತೆ ಇಂದು 11 ಘೋಷಣೆ ಗಳನ್ನು ಮಾಡಲಾಗುತ್ತಿದ್ದು, ಕಳೆದ ಎರಡು ತಿಂಗಳಲ್ಲಿ ಫಸಲ್ ಭೀಮಾ ಯೋಜನೆ ಅಡಿ ರೈತರಿಗೆ 6400 ಕೋಟಿ ರೂಪಾಯಿ ನೀಡಿದ್ದೇವೆ. ಕಳೆದ ಎರಡು ತಿಂಗಳಲ್ಲಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಅಡಿ ರೈತರಿಗೆ 18,700 ಕೋಟಿ ಹಣ ವರ್ಗಾವಣೆ ಮಾಡಿದ್ದೇವೆ. ಕಳೆದ ಎರಡು ತಿಂಗಳಲ್ಲಿ ರೈತರಿಗೆ ಕನಿಷ್ಟ ಬೆಂಬಲ ಬೆಲೆ ನೀಡಿ ಉತ್ಪನ್ನ ಖರೀದಿ ಮಾಡಿದ್ದೇವೆ. ಇದಕ್ಕಾಗಿ 74,300 ಕೋಟಿ ರೂಪಾಯಿ ಹಣಕಾಸಿನ ನೆರವು ನೀಡಲಾಗಿದೆ ಎಂದು ಹೇಳಿದರು.