ಮಡಿಕೇರಿ, ಮೇ 15: ಜಿಲ್ಲೆಯಲ್ಲಿರುವ ಎಲ್ಲಾ ವಲಸೆ ಕಾರ್ಮಿಕರನ್ನು ಅವರವರ ಸ್ವಂತ ಊರುಗಳಿಗೆ ಕಳುಹಿಸಲು ಜಿಲ್ಲಾಡಳಿತದಿಂದ ವ್ಯವಸ್ಥೆ ಮಾಡಲಾಗುತ್ತಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿನ ವಲಸೆ ಕಾರ್ಮಿಕರನ್ನು ಕರ್ನಾಟಕ ಮತ್ತು ಅವರವರ ಸ್ವಂತ ಊರುಗಳಿಗೆ ಕಳುಹಿಸಲು ಕೊಡಗು ಜಿಲ್ಲಾಡಳಿತವು ಕೆಎಸ್‍ಆರ್‍ಟಿಸಿ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡು ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುತ್ತಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ಹಾಗೆಯೇ ಜಿಲ್ಲೆಯಲ್ಲಿರುವ ಉತ್ತರ ಭಾರತದ ರಾಜ್ಯಗಳ ವಲಸೆ ಕಾರ್ಮಿಕರನ್ನು ಅವರವರ ಸ್ವಂತ ಊರುಗಳಿಗೆ ಕಳುಹಿಸುವ ಸಂಬಂಧ ಸರ್ಕಾರದಿಂದ ಆಯೋಜಿಸಲಾಗಿರುವ ವಿಶೇಷ ಶ್ರಮಿಕ ರೈಲುಗಳಿಗೆ ಕಾರ್ಮಿಕರು ತೆರಳಲು ಅನುಕೂಲವಾಗುವಂತೆ ಸಂಬಂಧಪಟ್ಟ ರೈಲು ನಿಲ್ದಾಣಗಳಿಗೆ ಕಾರ್ಮಿಕರನ್ನು ತಲುಪಿಸಲು ಜಿಲ್ಲಾಡಳಿತದಿಂದ ಬಸ್ ವ್ಯವಸ್ಥೆ ಮಾಡಲಾಗುತ್ತಿದೆ.

ಅಂದಾಜು 204 ಟ್ರಿಪ್‍ಗಳನ್ನು ಕಾಯ್ದಿರಿಸಲಾಗಿದೆ. ಸುಮಾರು 4 ಸಾವಿರಕ್ಕೂ ಅಧಿಕ ವಲಸೆ ಕಾರ್ಮಿಕರು ಇದರ ಪ್ರಯೋಜನವನ್ನು ಪಡೆಯಲಿದ್ದಾರೆ. ಬಸ್ ಕಾಯ್ದಿರಿಸುವಿಕೆ ಪ್ರಕ್ರಿಯೆ ಇನ್ನೂ ಜಾರಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಾಹಿತಿ ನೀಡಿದ್ದಾರೆ.