ಮಡಿಕೇರಿ, ಮೇ 20: ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ತಾ. 22 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಅಂದು ಮಧ್ಯಾಹ್ನ 12 ಗಂಟೆಗೆ ಕೋವಿಡ್-19 ಬಗ್ಗೆ ಜಿಲ್ಲೆಯಲ್ಲಿ ಕೈಗೊಂಡ ಮುಂಜಾಗ್ರತಾ ಕ್ರಮಗಳು ಸೇರಿದಂತೆ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ಹಾಗೂ ತಾ. 29 ರಂದು ಮುಖ್ಯಮಂತ್ರಿ ಅವರಿಂದ ಮದೆ ಹಾಗೂ ಜಂಬೂರು ಗ್ರಾಮಗಳಲ್ಲಿ ಪ್ರವಾಹ ಸಂತ್ರಸ್ತರಿಗೆ ನಿರ್ಮಿಸಿದ ಮನೆಗಳ ಹಸ್ತಾಂತರ ಕಾರ್ಯಕ್ರಮ ಹಿನ್ನೆಲೆ ಪೂರ್ವಭಾವಿ ಸಭೆಯನ್ನು ನಗರದ ನೂತನ ಜಿ.ಪಂ. ಸಭಾಂಗಣದಲ್ಲಿ ನಡೆಸಲಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ಮಾನ್ಯ ಸಚಿವರು ಜಿಲ್ಲೆಯ ಮದೆ, ಬಿಳಿಗೇರಿ, ಗಾಳಿಬೀಡು ಹಾಗೂ ಜಂಬೂರು ಗ್ರಾಮಗಳಲ್ಲಿ ಪ್ರವಾಹ ಸಂತ್ರಸ್ತರಿಗಾಗಿ ನಿರ್ಮಾಣವಾಗುತ್ತಿರುವ ಮನೆಗಳ ಕಾಮಗಾರಿಗಳ ಸ್ಥಳ ಪರಿಶೀಲನೆ ಮಾಡಲಿದ್ದಾರೆ.