ಮಡಿಕೇರಿ, ಮೇ.20: ಮುಂಗಾರು ಹತ್ತಿರ ಬರುತ್ತಿರುವ ಹಿನ್ನೆಲೆ ಕೋವಿಡ್ ಜೊತೆಗೆ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬು ಕುಮಾರ್ ಸಲಹೆ ಮಾಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ, ಮುಂಗಾರು ಸಂಬಂಧ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಬುಧವಾರ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು.

ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇರುವುದರಿಂದ ಕೃಷಿ, ತೋಟಗಾರಿಕೆ ಇಲಾಖೆಗಳು ಸೇರಿದಂತೆ ಹಲವು ಅಭಿವೃದ್ಧಿ ಇಲಾಖೆಗಳು ಕೃಷಿಕರಿಗೆ ಸರ್ಕಾರದ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು. ಜೊತೆಗೆ ಎಂಜಿನಿಯರಿಂಗ್ ವಿಭಾಗದವರು ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಸೂಚಿಸಿದರು.

ಕೋವಿಡ್ ಸಂಬಂಧ ಜಿಲ್ಲಾ ಆಸ್ಪತ್ರೆಗಳಲ್ಲಿ ಮಾಸ್ಕ್, ಸ್ಯಾನಿಟೈಸರ್, ಪಿಪಿಇ ಕಿಟ್ ಹೀಗೆ ಎಲ್ಲಾ ರೀತಿಯ ಸೌಲಭ್ಯ ಇರುವಂತೆ ನೋಡಿಕೊಳ್ಳ ಬೇಕು. ಸರ್ಕಾರದ ನಿರ್ದೇಶನ ಪಾಲಿಸಬೇಕು. ಅಂತರ ರಾಜ್ಯ ಮತ್ತು ವಿದೇಶದಿಂದ ಜಿಲ್ಲೆಗೆ ಆಗಮಿಸುವವರ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು ಎಂದು ನಿರ್ದೇಶನ ನೀಡಿದರು.

ಕೋವಿಡ್ ಸಂಬಂಧ ಹೆಚ್ಚಿನ ಜಾಗೃತಿ ಮೂಡಿಸುವುದರ ಜೊತೆಗೆ 10 ವರ್ಷದೊಳಗಿನ ಮಕ್ಕಳು ಹಾಗೂ 60 ವರ್ಷ ಮೇಲ್ಪಟ್ಟವರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಯಾವುದೇ ರೀತಿಯ ರೋಗ ಲಕ್ಷಣಗಳು ಕಂಡುಬಂದರೂ ಸಹ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.

ಕೋವಿಡ್ ಪರಿಸ್ಥಿತಿಯನ್ನು ಜಿಲ್ಲಾಡಳಿತ ಉತ್ತಮವಾಗಿ ನಿಭಾಯಿಸುತ್ತಿದೆ. ಮುಂದಿನ ದಿನಗಳಲ್ಲಿಯೂ ಸಹ ಇನ್ನಷ್ಟು ಎಚ್ಚರಿಕೆ ವಹಿಸಿ ಕಾರ್ಯ ನಿರ್ವಹಿಸುವಂತಾಗ ಬೇಕು ಎಂದು ಸಲಹೆ ಮಾಡಿದರು.

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಾತನಾಡಿ ಕೋವಿಡ್-19 ಸಂಬಂಧಿಸಿದಂತೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವರು ತಾ. 22 ರಂದು ಜಿಲ್ಲೆಗೆ ಆಗಮಿಸಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಿರ್ಮಿಸಲಾಗಿರುವ ಕೋವಿಡ್ ಪ್ರಯೋಗಾಲಯಕ್ಕೆ ಚಾಲನೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಮಳೆಗಾಲಕ್ಕೆ ಅಗತ್ಯ ಸಿದ್ಧ್ದತೆ ಮಾಡಿಕೊಳ್ಳಲಾಗಿದೆ. ಸದ್ಯದಲ್ಲಿಯೇ ಎನ್‍ಡಿಆರ್‍ಎಫ್ ತಂಡ ಜಿಲ್ಲೆಗೆ ಆಗಮಿಸಲಿದೆ. ಗ್ರಾ.ಪಂ., ನಗರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ ಅವರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.

ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಅವರು ಬಿಹಾರ, ಉತ್ತರ ಪ್ರದೇಶ, ಜಾರ್ಖಂಡ್, ಮೇಘಾಲಯ, ತಮಿಳುನಾಡು, ಕೇರಳ ಹೀಗೆ ವಿವಿಧ ರಾಜ್ಯಗಳಿಗೆ ವಲಸೆ ಕಾರ್ಮಿಕರನ್ನು ಕಳುಹಿಸಲು ಕ್ರಮವಹಿಸಲಾಗಿದೆ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ಕಾರ್ಯಪ್ಪ, ಅಧೀಕ್ಷಕ ಡಾ.ಲೋಕೇಶ್ ಅವರು ಕೋವಿಡ್-19 ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು. ತಾ.ಪಂ.ಇಒ.ಗಳು, ತಹಶೀಲ್ದಾರರು, ಇಲಾಖೆ ಅಧಿಕಾರಿಗಳು ಇತರರು ಹಲವು ಮಾಹಿತಿ ನೀಡಿದರು.