ಸಿದ್ದಾಪುರ, ಮೇ 21 : ಜಿಲ್ಲೆಯಲ್ಲಿ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಹೆಸರು ಪಡೆದಿರುವ ಸಿದ್ದಾಪುರ ಗ್ರಾಮ ಪಂಚಾಯಿತಿಯ ಆಡಳಿತಾವಧಿಯ ಕೊನೆಯ ಸಭೆಯು ಪಂಚಾಯಿತಿ ಅಧ್ಯಕ್ಷ ಮಣಿ ಅಧ್ಯಕ್ಷತೆಯಲ್ಲಿ ಗುರುವಾರದಂದು ನಡೆಯಿತು. ಸಭೆಯ ಪ್ರಾರಂಭದಿಂದಲೇ ಸದಸ್ಯರು ಹಾಗೂ ಅಧ್ಯಕ್ಷರ ನಡುವೆ ಮಾತಿನ ಚಕಮಕಿ ನಡೆಯಿತು. ಗ್ರಾಮ ಪಂಚಾಯಿತಿ ಸದಸ್ಯ ಹುಸೇನ್ ಮಾತನಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಗ್ರಾಮ ಪಂಚಾಯಿತಿ ಸದಸ್ಯರುಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಪಕ್ಷೀಯ ನಿರ್ಧಾರದಿಂದ ಹಲವಾರು ಕಾಮಗಾರಿಗಳನ್ನು ನಡೆಸಿದ್ದಾರೆ ಎಂದು ಆರೋಪಿಸಿದರು. ಕೆಲವು ವಾರ್ಡ್‍ಗಳಿಗೆ ಅನುದಾನಗಳನ್ನು ಬಿಡುಗಡೆ ಮಾಡುವಲ್ಲಿ ತಾರತಮ್ಯ ಎಸಗಿದ್ದಾರೆ ಎಂದು ದೂರಿದರು. ಈ ಸಂದರ್ಭ ಅಧ್ಯಕ್ಷರ ಹಾಗೂ ಸದಸ್ಯರುಗಳ ನಡುವೆ ಮಾತಿನ ಚಕಮಕಿ ನಡೆಯಿತು.