ಸಂತೋಷ್ ಬಿಎಸ್‍ವೈ ರಾಜಕೀಯ ಕಾರ್ಯದರ್ಶಿ

ಬೆಂಗಳೂರು, ಮೇ 30: ಆಪರೇಷನ್ ಕಮಲದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಂಬಂಧಿ ಹಾಗೂ ಮಾಜಿ ಆಪ್ತ ಸಹಾಯಕ ಎನ್.ಆರ್. ಸಂತೋಷ್ ಅವರನ್ನು ಮುಖ್ಯಮಂತ್ರಿಗಳ ನಾಲ್ಕನೇ ರಾಜಕೀಯ ಕಾರ್ಯದರ್ಶಿಯಾಗಿ ಶನಿವಾರ ನೇಮಿಸಲಾಗಿದೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಗ್ರಾಮದ ಎನ್‍ಆರ್ ಸಂತೋಷ್ ಅವರನ್ನು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಇಂದು ಅಧಿಕೃತ ಆದೇಶ ಹೊರಡಿಸಿದೆ. ಈಗಾಗಲೇ ಯಲಹಂಕ ಶಾಸಕ ಎಸ್‍ಆರ್ ವಿಶ್ವನಾಥ್, ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಮತ್ತು ಶಂಕರಗೌಡ ಪಾಟೀಲ್ ಅವರು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕಗೊಂಡಿದ್ದಾರೆ. ಇದೀಗ ನಾಲ್ಕನೇ ರಾಜಕೀಯ ಕಾರ್ಯದರ್ಶಿಯಾಗಿ ಸಂತೋಷ್ ನೇಮಕವಾಗಿದ್ದಾರೆ.

ಚೆಕ್‍ಪೋಸ್ಟ್‍ಗಳಲ್ಲಿ ಕಟ್ಟುನಿಟ್ಟು ಕ್ರಮ

ಚಿಕ್ಕೋಡಿ, ಮೇ 30: ಅಂತರ್ ರಾಜ್ಯ ಗಡಿಗಳಲ್ಲಿನ ಚೆಕ್‍ಪೋಸ್ಟ್‍ಗಳಲ್ಲಿ ಕೆಲಸ ಮಾಡುವವರು ಯಾವುದೇ ಒತ್ತಡಕ್ಕೆ ಮಣಿಯದೇ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಖಡಕ್ ಸೂಚನೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕುಗನೊಳ್ಳಿ ಬಳಿ ಇರುವ ಅಂತರ್ ರಾಜ್ಯ ಚೆಕ್‍ಪೋಸ್ಟ್‍ಗೆ ಭೇಟಿ ನೀಡಿ ಪರಿಶೀಲಿಸಿ, ಬಳಿಕ ಅಧಿಕಾರಿಗಳ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಮಹಾರಾಷ್ಟ್ರದಿಂದ ಆಗಮಿಸುತ್ತಿರುವ ಜನರಲ್ಲಿ ಅತೀ ಹೆಚ್ಚು ಸೋಂಕು ಕಂಡುಬಂದಿದೆ. ಇನ್ನೂ ಹೆಚ್ಚಳವಾಗುತ್ತಿದೆ. ಆದ್ದರಿಂದ ರಾಜ್ಯ ಪ್ರವೇಶಕ್ಕೆ ಇ-ಪಾಸ್ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇ-ಪಾಸ್ ಇಲ್ಲದೆ ಬರುತ್ತಿರುವವರನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.

ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಶವಗಳ ಪತ್ತೆ

ಚಂದ್ರಾಪುರ್, ಮೇ 30: ಮಹಾರಾಷ್ಟ್ರದ ಸರ್ಕಾರಿ ಇಂಜಿನೀಯರ್ ಕಾಲೇಜಿನಲ್ಲಿ ಸಾಂಸ್ಥಿಕ ಕ್ವಾರಂಟೈನ್‍ಗೆ ಒಳಗಾಗಿದ್ದ 30 ವರ್ಷದ ವ್ಯಕ್ತಿಯೊಬ್ಬರು ನೇಣಿಗೆ ಶರಣಾಗಿದ್ದಾರೆ. ಮತ್ತೊಬ್ಬ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾರೆ. ಶನಿವಾರ ಬೆಳಿಗ್ಗೆ ಇಬ್ಬರು ಪುರುಷರ ಶವ ಪತ್ತೆಯಾಗಿದೆ ಜಿಲ್ಲಾ ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಕೊಠಡಿಯಲ್ಲಿ ಚಂದ್ರಾಪುರ ನಗರದ 30 ವರ್ಷದ ವ್ಯಕ್ತಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಗಪುರದಿಂದ ಆಗಮಿಸಿದ್ದ ಆತನನ್ನು ಆರೋಗ್ಯಾಧಿಕಾರಿಗಳು ಸಾಂಸ್ಥಿಕ ಕ್ವಾರಂಟೈನ್‍ಗೆ ಒಳಪಡಿಸಿದ್ದರು. ಆದರೆ ಆತ ಏಕೆ ಆತ್ಮಹತ್ಯೆ ಮಾಡಿಕೊಂಡ ಎಂಬುದು ಇನ್ನೂ ತಿಳಿದು ಬಂದಿಲ್ಲ. ಮತ್ತೊಂದು ಪ್ರಕರಣದಲ್ಲಿ 40 ವರ್ಷದ ವ್ಯಕ್ತಿ ಮಧ್ಯಪ್ರದೇಶದಿಂದ ಆಗಮಿಸಿದ್ದ ವ್ಯಕ್ತಿಯನ್ನು ಕ್ವಾರಂಟೈನ್‍ಗೆ ಒಳಪಡಿಸಲಾಗಿತ್ತು. ಈತ ಕುಟುಂಬದ ಜೊತೆ ವಾಸವಾಗಿದ್ದ. ವಿಶ್ರಾಂತಿ ತೆಗೆದುಕೊಳ್ಳುವುದಾಗಿ ಹೇಳಿ ಹೋದ ವ್ಯಕ್ತಿ ಎಷ್ಟು ಹೊತ್ತಾದರೂ ವಾಪಸ್ ಬಾರಲಿಲ್ಲ, ನಂತರ ಈತ ಆತ್ಮಹತ್ಯಗೆ ಶರಣಾಗಿರುವುದು ಕಂಡು ಬಂದಿದೆ. ಇಬ್ಬರು ವ್ಯಕ್ತಿಗಳ ಗಂಟಲಿನ ದ್ರವದ ಮಾದರಿ ಸಂಗ್ರಹಿಸಿದ್ದು ಪರೀಕ್ಷೆಗೆ ಕಳುಹಿಸಲಾಗಿದೆ.