ಮಡಿಕೇರಿ, ಜೂ. 3: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘ ತಾ. 4 ರಿಂದ (ಇಂದಿನಿಂದ) ಕೆಲಸ ಬಹಿಷ್ಕರಿಸಿ ಅನಿರ್ಧಿಷ್ಟಾವಧಿ ಹೋರಾಟ ನಡೆಸಲು ಕರೆ ನೀಡಿರುವುದರಿಂದ ಕೊಡಗು ಜಿಲ್ಲೆಯಲ್ಲೂ ನೌಕರರು ಕೆಲಸಕ್ಕೆ ಹಾಜರಾಗುವುದಿಲ್ಲವೆಂದು ಸಂಘದ ಅಧ್ಯಕ್ಷ ಎಂ. ಮಹದೇವಪ್ಪ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದ ಅವರು, ನೌಕರರ ಪ್ರಮುಖ ಬೇಡಿಕೆಗಳಾದ ಸೇವಾ ಭದ್ರತೆ, ಸಮಾನ ಕೆಲಸಕ್ಕೆ ಸಮಾನ ವೇತನ, ಆರೋಗ್ಯ ಮತ್ತು ಜೀವ ವಿಮೆ, ಎಚ್.ಆರ್. ಪಾಲಿಸಿ ಸೇರಿದಂತೆ ಕೊವೀಡ್-19 ವಿಶೇಷ ಪ್ಯಾಕೇಜ್ ಹಾಗೂ ಇನ್ನಿತರ ಮೂಲಭೂತ ಸೌಲಭ್ಯಗಳಿಗಾಗಿ ಒತ್ತಾಯಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ನಡೆಸುತ್ತಿರುವುದಾಗಿ ತಿಳಿಸಿದರು.

ಮನವಿ ಪತ್ರ ನೀಡುವ ಸಂದರ್ಭ ಸಂಘದ ಪ್ರಧಾನ ಕಾರ್ಯದರ್ಶಿ ರಘು, ಖಜಾಂಚಿ ದಿವಾಕರ್ ಮತ್ತಿತರ ಸಿಬ್ಬಂದಿಗಳು ಹಾಜರಿದ್ದರು.