ಬಾಗಲಕೋಟೆ, ಜೂ. 3: ಜುಲೈ 1ರಿಂದ ರಾಜ್ಯದಲ್ಲಿ ಶಾಲೆ ಆರಂಭವಾಗುವುದಿಲ್ಲ. ಇದು ಯೋಚಿತ ದಿನಾಂಕವಾಗಿದೆ. ರಾಜ್ಯದ ಅನುದಾನಿತ, ಅನುದಾನ ರಹಿತ ಮತ್ತು ಸರ್ಕಾರಿ ಶಾಲೆಗಳಲ್ಲಿ ಪಾಲಕರ ಸಭೆ ನಡೆಸಿದ ಬಳಿಕ ಯಾವಾಗ ಶಾಲೆ ಆರಂಭಿಸಬೇಕು ಎಂದು ನಿರ್ಧರಿಸಲಾಗುವುದು. ಜೂ. 10, 11, 12ರೊಳಗೆ ಎಲ್ಲಾ ಶಾಲೆಗಳಲ್ಲಿ ಪೋಷಕರ ಸಭೆ ನಡೆಸಿ ಅಲ್ಲಿ ಬರುವ ಮಾಹಿತಿಯನ್ನು ಸಂಗ್ರಹಿಸಿ ಕೇಂದ್ರ ಸರ್ಕಾರಕ್ಕೆ ಜೂನ್ 15ರೊಳಗೆ ಸಲ್ಲಿಸಿ ನಂತರ ಶಾಲಾ ಆರಂಭ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.ನಗರದಲ್ಲಿಂದು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ ಕುರಿತು ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪ್ರೀ ನರ್ಸರಿ, ಎಲ್‍ಕೆಜಿ, ಯುಕೆಜಿ ಮತ್ತು 1 ಮತ್ತು 2ನೇ ತರಗತಿಯ ಮಕ್ಕಳಿಗೆ ಶಾಲಾ ಆರಂಭದ ಕುರಿತು ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಸದ್ಯಕ್ಕೆ ಶಾಲೆಗಳನ್ನು ಆರಂಭಿಸದಂತೆ ಬಹುತೇಕ ಜನರು ತಮ್ಮ ಅಭಿಪ್ರಾಯವನ್ನು ಸಹ ಸಾಮಾಜಿಕ ಜಾಲತಾಣಗಳ ಮೂಲಕ ವ್ಯಕ್ತಪಡಿಸಿದ್ದಾರೆ. ಇದನ್ನು ಗಮನಕ್ಕೆ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಕೊರೊನಾ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಮೇಲೆ ಹೆಚ್ಚು ಪರಿಣಾಮ ಬೀರಿದೆ. ಮುಂದಿನ ದಿನಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪಾಠವನ್ನು ಹೇಗೆ ಹೇಳಬೇಕು, ಮಕ್ಕಳಿಗೆ ಸುರಕ್ಷತೆ ಹೇಗೆ ಎಂಬಿತ್ಯಾದಿ ವಿಷಯಗಳ ಕುರಿತು ಸಮಗ್ರ ಮಾಹಿತಿಯನ್ನು ಕಲೆ ಹಾಕಿಕೊಂಡು ಮುಂದಿನ ನಿರ್ಧಾರ ಪ್ರಕಟಿಸಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿ 8,48,203 ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲಿದ್ದಾರೆ. ಇದಕ್ಕಾಗಿ 3000 ಪರೀಕ್ಷಾ ಕೇಂದ್ರವನ್ನು ಸಿದ್ಧಪಡಿಸಲಾಗಿದೆ ಎಂದು ಹೇಳಿದರು.

ಪರೀಕ್ಷೆ ಬರೆಯಲು ಎಲ್ಲಾ ಮಕ್ಕಳಿಗೆ ಪರೀಕ್ಷಾ ಕೇಂದ್ರವನ್ನು ಪ್ರವೇಶ ಮಾಡುವ ಮುನ್ನ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುವುದು. ಇದಲ್ಲದೆ ಪ್ರತಿಯೊಬ್ಬ ವಿದ್ಯಾರ್ಥಿಗೂ ಎರಡೆರಡರಂತೆ ಮಾಸ್ಕ್‍ಗಳನ್ನು ನೀಡಲಾಗುವುದು. ಪರೀಕ್ಷೆ ಬರೆಯುವ ಮಕ್ಕಳ ಸುರಕ್ಷತೆ ಕುರಿತು ಸರ್ಕಾರ ಹೆಚ್ಚು ಆದ್ಯತೆ ನೀಡಲಾಗಿದೆ. ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಪರೀಕ್ಷೆ ಬರೆಯಲು ಎಲ್ಲ ರೀತಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.