ಸಿದ್ದಾಪುರ, ಜೂ. 4: ನೆಲ್ಯಹುದಿಕೇರಿ ಗ್ರಾ.ಪಂ. ವ್ಯಾಪ್ತಿಯ ನದಿ ತೀರದ ಸಂತ್ರಸ್ತರಿಗೆ ಜಿಲ್ಲಾಡಳಿತವು ಕೂಡಲೇ ಪುನರ್ವಸತಿ ಕಲ್ಪಿಸಿ ಕೊಡಬೇಕಾಗಿ ಒತ್ತಾಯಿಸಿ ಸಿಪಿಐ(ಎಂ) ಪಕ್ಷದ ವತಿಯಿಂದ ನೆಲ್ಯಹುದಿಕೇರಿ ಗ್ರಾ.ಪಂ. ಎದುರು ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಿಪಿಐ(ಎಂ) ಪಕ್ಷದ ಮುಖಂಡ ಪಿ.ಆರ್. ಭರತ್ ಕಳೆದ ಎರಡು ವರ್ಷಗಳಿಂದ ಪ್ರವಾಹಕ್ಕೆ ಸಿಲುಕಿ ನೆಲ್ಯಹುದಿಕೇರಿ ಗ್ರಾ.ಪಂ. ವ್ಯಾಪ್ತಿಯ ನದಿ ತೀರದ ನೂರಾರು ಮನೆಗಳು ನೆಲಸಮಗೊಂಡಿದ್ದವು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಅರೆಕಾಡು ಗ್ರಾಮದಲ್ಲಿ 8 ಏಕರೆ ಒತ್ತುವರಿ ಜಾಗವನ್ನು ವಶಕ್ಕೆ ಪಡೆದುಕೊಂಡಿತ್ತು. ಆದರೆ ಈವರೆಗೂ ಸಂತ್ರಸ್ತರಿಗೆ ಮನೆ ನಿರ್ಮಾಣ ಕಾರ್ಯ ಮಾಡದೇ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು. ಇದೀಗ ಮತ್ತೊಮ್ಮೆ ಮಳೆಗಾಲ ಆರಂಭವಾಗಿದ್ದು, ಪ್ರವಾಹದ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಿಕೊಡಬೇಕೆಂದು ಭರತ್ ಒತ್ತಾಯಿಸಿದರು. ಪ್ರತಿಭಟನೆ ಸಂದರ್ಭದಲ್ಲಿ ಎಂ.ಜಿ. ಜೋಸ್, ಶಿವರಾಮ್ ಹಾಜರಿದ್ದರು. ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಕಾರ್ಯದರ್ಶಿಗೆ ನೀಡಲಾಯಿತು.