ಮಡಿಕೇರಿ, ಜೂ. 4: ನಿರಾಶ್ರಿತರಿಗಾಗಿ ಸರ್ಕಾರ ನಿರ್ಮಿಸಿಕೊಟ್ಟಿರುವ ಮನೆಗಳನ್ನು ಯಾವದೇ ಕಾರಣಕ್ಕೂ ಮಾರಾಟ ಮಾಡಬೇಡಿ. ಸಾಮಾನ್ಯ ಜನರ ತೆರಿಗೆ ಹಣ ಹಾಗೂ ದಾನಿಗಳ ಹಣದಿಂದ ನಿರ್ಮಿಸಲಾಗಿರುವ ಮನೆಗಳನ್ನು ಪಡೆದುಕೊಂಡ ಫಲಾನುಭವಿಗಳು ತಮಗೆ ಸಿಕ್ಕಂತಹ ಮನೆಗಳನ್ನು ಶಾಶ್ವತವಾಗಿ ಉಳಿಸಿಕೊಳ್ಳಬೇಕೆಂದು ವಸತಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಹೇಳಿದರು.ಪ್ರಾಕೃತಿಕ ವಿಕೋಪದಿಂದ ಸಂತ್ರಸ್ತರಾದವರಿಗೆ ಮಾದಾಪುರ ಸಮೀಪದ ಜಂಬೂರಿನ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಬಡಾವಣೆಯಲ್ಲಿ ನಿರ್ಮಿಸಲಾದ 383 ಹಾಗೂ ಮದೆ ಗ್ರಾ.ಪಂ. ವ್ಯಾಪ್ತಿಯ ಗೋಳಿಕಟ್ಟೆಯಲ್ಲಿ ನಿರ್ಮಿಸಿದ 80 ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿ ಅವರು ಮಾತನಾಡಿದರು. ಕಣರ್ಂಗೇರಿ ಗ್ರಾಮದಲ್ಲಿ ನಿರ್ಮಿಸಿದ 35 ಮನೆಗಳನ್ನು ಈಗಾಗಲೇ ಸಂತ್ರಸ್ತರಿಗೆ ಹಸ್ತಾಂತರಿಸಲಾಗಿದೆ. ಅಲ್ಲದೆ ಸ್ವಂತ ಜಾಗದಲ್ಲಿ ಮನೆ ನಿರ್ಮಿಸಿಕೊಳ್ಳಲು ಬಯಸಿದ್ದ 65 ಫಲಾನುಭವಿಗಳಿಗೆ ತಲಾ 9.85 ಲಕ್ಷ ಮೊತ್ತವನ್ನು ಪಾವತಿಸಲಾಗಿದೆ. ಉಳಿದಂತೆ ಗಾಳಿಬೀಡು ಮತ್ತು ಬಿಳಿಗೇರಿಯಲ್ಲಿ ನಿರ್ಮಾಣ ವಾಗುತ್ತಿರುವ 242 ಮನೆಗಳ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ, ಹಸ್ತಾಂತರಿಸಲಾಗುವುದು ಎಂದು ತಿಳಿಸಿದರು.

ಇನ್ಫೋಸಿಸ್ ವತಿಯಿಂದಲೂ ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಸದ್ಯದಲ್ಲೇ ಈ ಮನೆಗಳ ಕಾಮಗಾರಿ ಪೂರ್ಣಗೊಳ್ಳಲಿವೆ. ಜಂಬೂರಿನ ಬಡಾವಣೆಯಲ್ಲಿ ಅಂಗನವಾಡಿ ಸೇರಿದಂತೆ ಎಲ್ಲಾ ರೀತಿಯ ಮೂಲ ಸೌಲಭ್ಯ ಕಲ್ಪಿಸಲಾಗುವುದು ಎಂದರು.2018 ರ ಆಗಸ್ಟ್ ತಿಂಗಳಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ ಅವರು ಮನೆ ನಿರ್ಮಾಣಕ್ಕೆ ಚಾಲನೆ ನೀಡಿದ್ದರು, ಈಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅವಧಿಯಲ್ಲಿ ಮನೆಗಳ ಕಾಮಗಾರಿ ಪೂರ್ಣಗೊಂಡಿದ್ದು, ಸಂತ್ರಸ್ತರಿಗೆ ಹಸ್ತಾಂತರಿಸಲಾಗಿದೆ ಎಂದರು.

ಮನೆಗಳ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದ ಕಂದಾಯ ಸಚಿವ ಆರ್. ಅಶೋಕ್ ಮಾತನಾಡಿ, ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರದ ಪ್ರಾಕೃತಿಕ ವಿಕೋಪ ನಿಧಿಗೆ ಈ ಬಾರಿ 1039 ಕೋಟಿ ಅನುದಾನ ಘೋಷಿಸಿದ್ದು, ಇದರಲ್ಲಿ 385 ಕೋಟಿ ಈಗಾಗಲೇ ಬಿಡುಗಡೆಯಾಗಿದೆ. ಪ್ರಾಕೃತಿಕ ವಿಕೋಪದಡಿ ರಾಜ್ಯ ಸರ್ಕಾರದಲ್ಲಿ ಹೆಚ್ಚಿನ ಹಣವಿದ್ದು, ಯಾವದೇ ಅನುದಾನದ ಕೊರತೆಯಿಲ್ಲ. ಸಂತ್ರಸ್ತರ ನೆರವಿಗೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

(ಮೊದಲ ಪುಟದಿಂದ) ಸಂಸದ ಪ್ರತಾಪ್ ಸಿಂಹ ಮಾತನಾಡಿ ಜಿಲ್ಲೆಯ ಶಾಸಕರುಗಳು, ಜಿಲ್ಲಾಡಳಿತದ ಹಿಂದಿನ ಹಾಗೂ ಪ್ರಸ್ತುತ ಇರುವ ಅಧಿಕಾರಿಗಳ, ಹಿಂದಿನ ಮುಖ್ಯಮಂತ್ರಿ ಹಾಗೂ ಉಸ್ತುವಾರಿ ಸಚಿವರು ಮತ್ತು ಹಾಲಿ ಇರುವ ಸರ್ಕಾರದ ಪರಿಶ್ರಮದಿಂದ ನಿರಾಶ್ರಿತರಿಗೆ ಮನೆಗಳು ನಿರ್ಮಾಣವಾಗಿವೆ. ಇದಕ್ಕಾಗಿ ಶ್ರಮಿಸಿದವರೆಲ್ಲರಿಗೂ ಜನತೆ ಕೃತಜ್ಞರಾಗಿರಬೇಕೆಂದರು.

ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ಸಂತ್ರಸ್ತರಿಗೆ ನೀಡಲಾಗಿರುವ ಮನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಮನೆಯನ್ನು ಪಡೆದು ಅದರಲ್ಲಿ ವಾಸವಿಲ್ಲದಿದ್ದರೆ ಅದು ರದ್ದಾಗಲಿದೆ. ಆನಂತರ ಶಾಸಕರುಗಳನ್ನು ಯಾರೂ ದೂರಬೇಡಿ ಎಂದು ಎಚ್ಚರಿಕೆಯಿತ್ತರು. ಶಾಸಕ ಅಪ್ಪಚ್ಚುರಂಜನ್ ಮಾತನಾಡಿ, ಸುರಕ್ಷಿತವಾದ ಜಾಗದಲ್ಲಿ ಉತ್ತಮವಾದ ಮನೆಗಳು ನಿರ್ಮಾಣವಾಗಿದ್ದು, ಅತ್ಯುತ್ತಮ ಗುಣಮಟ್ಟದಿಂದ ಕೂಡಿದೆ ಎಂದು ಹೇಳಿದರು.

ಈ ಸಂದರ್ಭ ವಿಧಾನಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ. ಅಧ್ಯಕ್ಷ ಹರೀಶ್, ಮಡಿಕೇರಿ ತಾ.ಪಂ. ಅಧ್ಯಕ್ಷೆ ಶೋಭಾ ಮೋಹನ್, ಸೋಮವಾರಪೇಟೆ ತಾ.ಪಂ. ಅಧ್ಯಕ್ಷ ಪುಷ್ಪಾ ರಾಜೇಶ್, ಜಿ.ಪಂ. ಸದಸ್ಯೆ ಚಂದ್ರಕಲಾ, ತಾ.ಪಂ. ವಸತಿ ಇಲಾಖೆ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ರಾಜೀವ್‍ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ. ರಾಮ್ ಪ್ರಸಾದ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪಣ್ಣೇಕರ್, ಜಿ.ಪಂ. ಸಿಇಓ ಲಕ್ಷ್ಮಿಪ್ರಿಯ, ಅಪರ ಜಿಲ್ಲಾಧಿಕಾರಿ ಸ್ನೇಹ, ಹಾಜರಿದ್ದರು.

ಇದೇ ಸಂದರ್ಭದಲ್ಲಿ ಟಿ.ವಿ 9 ವಾಹಿನಿ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ (ಎಚ್.ಪಿ) ವತಿಯಿಂದ ಹೊಸ ಮನೆ ಪ್ರವೇಶಿಸಿದ ಸಂತ್ರಸ್ತರಿಗೆ ಉಚಿತ ಅಡುಗೆ ಅನಿಲ ಸ್ಟೌ ವಿತರಿಸಲಾಯಿತು. ಮನೆ ನಿರ್ಮಾಣಕ್ಕೆ ಶ್ರಮಿಸಿದ ವಸತಿ ಇಲಾಖೆ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ರಾಜೀವ್ ಗಾಂಧೀ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಡಾ.ವಿ.ರಾಮ್ ಪ್ರಸಾದ್ ಮನೋಹರ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ ಸಿಇಒ ಕೆ.ಲಕ್ಷ್ಮೀಪ್ರಿಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಬೆಂಗಳೂರು ನಗರ ವಿಶೇಷ ಜಿಲ್ಲಾಧಿಕಾರಿ ಹಾಗೂ ಹಿಂದಿನ ಜಿಲ್ಲಾ ಪುನರ್ವಸತಿ ವಿಭಾಗದ ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ, ಉಪ ವಿಭಾಗಾಧಿಕಾರಿ ಟಿ. ಜವರೇಗೌಡ, ರಾಜೀವ್ ಗಾಂಧಿ ವಸತಿ ನಿಗಮದ ಯೋಜನಾ ನಿರ್ದೇಶಕ ಎಚ್. ಶ್ರೀನಿವಾಸ್ ಅವರನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಲಾಯಿತು.