ಮಡಿಕೇರಿ, ಜೂ. 8: ಎಸ್ಎಸ್ಎಲ್ಸಿ ಪರೀಕ್ಷೆಯು ತಾ. 25 ರಿಂದ ಜುಲೈ 3 ರವರೆಗೆ ನಡೆಯಲಿದ್ದು, ಸುಸೂತ್ರವಾಗಿ ಪರೀಕ್ಷೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮತ್ತು ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ ಸೂಚಿಸಿದರು.
ನಗರದ ಜಿ.ಪಂ.ಕೆಡಿಪಿ ಸಭಾಂಗಣದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಸಂಬಂಧಿಸಿದಂತೆ ಇದುವರೆಗೆ ಕೈಗೊಳ್ಳಲಾಗಿರುವ ಸಿದ್ಧತೆ ಬಗ್ಗೆ ಸೋಮವಾರ ಮಾಹಿತಿ ಪಡೆದು ಅವರು ಮಾತನಾಡಿದರು.
ಕೋವಿಡ್-19 ನಿಯಂತ್ರಣ ಮಾರ್ಗಸೂಚಿಗಳನ್ವಯ ಪರೀಕ್ಷಾ ಕೇಂದ್ರಗಳಿಗೆ ಪ್ರವೇಶಿಸುವ ವಿದ್ಯಾರ್ಥಿ ಗಳಿಗೆ ಹ್ಯಾಂಡ್ ಸ್ಯಾನಿಟೈಸರ್ ನೀಡುವುದು, ಮಾಸ್ಕ್, ನೀಡಿ ಜ್ವರ ಪರೀಕ್ಷೆ ಮಾಡಿ ನಂತರ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ ಕೊರೊನಾ ರೋಗವನ್ನು ಹರಡದಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳು ವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪರೀಕ್ಷಾ ಅವಧಿಯಲ್ಲಿ ಸಾರಿಗೆ ಸಂಚಾರ ಸಂಬಂಧಿಸಿದಂತೆ ಕೆಎಸ್ಆರ್ಟಿಸಿ ವ್ಯವಸ್ಥೆ ಕಲ್ಪಿಸುವುದು, ಖಾಸಗಿ ಬಸ್ಗಳ ಸಂಚಾರಕ್ಕೆ ಸಂಬಂಧಿಸಿದಂತೆ ಬಸ್ಗಳ ಓಡಾಟಕ್ಕೆ ಮನವಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಪರೀಕ್ಷಾ ಅವಧಿಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಉಳಿದುಕೊಳ್ಳುವಂತಾಗಲು ವಿದ್ಯಾರ್ಥಿ ನಿಲಯ ತೆರೆಯಲು ಅಗತ್ಯವಿರುವ ವಿದ್ಯಾರ್ಥಿ ನಿಲಯಗಳ ಪಟ್ಟಿ ಒದಗಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಕುಗ್ರಾಮಗಳಿಂದ ನದಿ, ಹೊಳೆ ದಾಟಿ ಬರುವ ಗ್ರಾಮಗಳ ವಿದ್ಯಾರ್ಥಿಗಳು ಇದ್ದಲ್ಲಿ ಅಂತಹ ವಿದ್ಯಾರ್ಥಿಗಳನ್ನು ವಿದ್ಯಾರ್ಥಿ ನಿಲಯದಲ್ಲಿ ಉಳಿದುಕೊಳ್ಳಲು ಅವಕಾಶ ನೀಡಬೇಕು. ಈ ಸಂಬಂಧ ಪೋಷಕರಿಗೆ ಮಾಹಿತಿ ನೀಡಬೇಕು. ಜಿಲ್ಲೆಯಲ್ಲಿ ಪರೀಕ್ಷೆ ಬರೆಯುವ ಕೇರಳದ ವಿದ್ಯಾರ್ಥಿಗಳು ಇದ್ದಲ್ಲಿ ಮಾಹಿತಿ ಒದಗಿಸಬೇಕು ಎಂದರು.
ಜಿಲ್ಲೆಯ ಮಕ್ಕಳು ಹೊರ ಜಿಲ್ಲೆಗೆ ಪರೀಕ್ಷೆಗೆ ತೆರಳುವುದು, ಹೊರ ಜಿಲ್ಲೆಯ ವಿದ್ಯಾರ್ಥಿಗಳು ಜಿಲ್ಲೆಗೆ ಪರೀಕ್ಷೆ ಬರೆಯಲು ಆಗಮಿಸುವುದು, ಮತ್ತಿತರ ಬಗ್ಗೆ ಮಾಹಿತಿ ಇರಬೇಕು. ಪರೀಕ್ಷೆ ಬರೆಯಲು ಎಲ್ಲಾ ವಿದ್ಯಾರ್ಥಿಗಳಿಗೆ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು.
ಪರೀಕ್ಷಾ ಕೇಂದ್ರಗಳು ಸುಸಜ್ಜಿತವಾಗಿದೆಯೇ ಎಂಬ ಬಗ್ಗೆ ಖಾತರಿ ಪಡಿಸಿಕೊಳ್ಳಬೇಕು. ಪರೀಕ್ಷಾ ಸಮಯದಲ್ಲಿ ಮಾಸ್ಕ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು.
ಜಿಲ್ಲೆಯಲ್ಲಿ ಜೂನ್, ಜುಲೈನಲ್ಲಿ ಪರೀಕ್ಷೆ ನಡೆಸುವುದು ದೊಡ್ಡ ಸವಾಲಾಗಿದ್ದು, ಅಧಿಕಾರಿಗಳು ಎಲ್ಲಾ ರೀತಿಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ ಮಾತನಾಡಿ ಹೊರ ಜಿಲ್ಲೆಗಳಿಂದ ಕೊಡಗು ಜಿಲ್ಲೆಯಲ್ಲಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳ ಮಾಹಿತಿ ಹಾಗೂ ಕೊಡಗು ಜಿಲ್ಲೆಯ ವಿದ್ಯಾರ್ಥಿಗಳು ಬೇರೆ ಜಿಲ್ಲೆಗಳಲ್ಲಿ ಪರೀಕ್ಷೆ ಬರೆಯುತ್ತಿರುವವರ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದು ಅಂತಹ ವಿದ್ಯಾರ್ಥಿಗಳಿಗೆ ಅಗತ್ಯ ವ್ಯವಸ್ಥೆ ಕಲ್ಪಿಸಿಕೊಡುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಚ್ಚಾಡೋ ಅವರು ತಾ. 25 ರಿಂದ ಜುಲೈ, 3 ರವರೆಗೆ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ 27 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಅಗತ್ಯ ಸಿದ್ಧ್ದತೆ ಮಾಡಿ ಕೊಳ್ಳಲಾಗಿದೆ ಎಂದು ತಿಳಿಸಿದರು.
ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಬೆಳಿಗ್ಗೆ 9 ಗಂಟೆಗೆ ಹಾಜರಾಗುವಂತೆ ತಿಳಿಸಿದ್ದು, ಪರೀಕ್ಷೆ ಆರಂಭಕ್ಕೂ ಮುನ್ನ ಪ್ರತೀ ವಿದ್ಯಾರ್ಥಿಗಳಿಗೆ ಜ್ವರ ತಪಾಸಣೆ ಮಾಡಿ ಹ್ಯಾಂಡ್ ಸ್ಯಾನಿಟೈಸರ್ ನೀಡಿ ಪರೀಕ್ಷಾ ಕೇಂದ್ರಗಳಿಗೆ ಬಿಡಲಾಗು ವುದು. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳ ಪೋಷಕರಿಗೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶವಿರುವುದಿಲ್ಲ. ಪರೀಕ್ಷಾ ಪ್ರವೇಶ ಪತ್ರ ನೀಡುವ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮಾಸ್ಕ್ನ್ನು ವಿತರಿಸಲಾಗುವುದು ಎಂದು ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್.ಕೆ. ಪಾಂಡು (ಸೋಮವಾರಪೇಟೆ), ಶ್ರೀಶೈಲ ಬೀಳಗಿ (ವೀರಾಜಪೇಟೆ), ಗುರುರಾಜ್ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ (ಮಡಿಕೇರಿ) ಅವರು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿದ್ಯಾರ್ಥಿ ನಿಲಯ ತೆರೆಯಬೇಕು ಎಂದು ಕೋರಿದರು.
ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಎಂ. ಶಿವಕುಮಾರ್, ಜಿಲ್ಲೆಯ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಇತರರು ಇದ್ದರು.