ಮಡಿಕೇರಿ, ಜೂ. 9 : ಕೃಷಿಕ ವರ್ಗ ಸೇರಿದಂತೆ ದೇಶದ ಹಲವು ಕ್ಷೇತ್ರಗಳಲ್ಲಿ ಉದ್ಭವಿಸಿರುವ ಸಮಸ್ಯೆಗಳನ್ನು ಪರಿಹರಿಸಲು ವಿಫಲವಾಗಿರುವ ಬಿಜೆಪಿ ಇದೀಗ ಕೇಂದ್ರ ಸರ್ಕಾರದ ಸಾಧನೆಗಳನ್ನು ಬಿಂಬಿಸಲು ಹೊರಟಿರುವುದು ಹಾಸ್ಯಾಸ್ಪದವೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕ ಟೀಕಿಸಿದೆ.ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಕಿಸಾನ್ ಘಟಕದ ಜಿಲ್ಲಾಧ್ಯಕ್ಷ ನೆರವಂಡ ಉಮೇಶ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಸಂಬಂಧಿಸಿದ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ರೈತರ ಉತ್ಪನ್ನಗಳಿಗೆ ಬೆಲೆ ನಿಗದಿಪಡಿಸುವ ಹೊಣೆಯನ್ನು ಖಾಸಗಿ ಕಂಪೆನಿಗಳಿಗೆ ಸರ್ಕಾರ ನೀಡಿದೆ. ಈಗಾಗಲೆ ಸಂಕಷ್ಟದಲ್ಲಿರುವ ರೈತರನ್ನು ಈ ಕಾಯ್ದೆ ಮತ್ತಷ್ಟು ತೊಂದರೆಗೆ ಸಿಲುಕಿಸಲಿದೆ ಎಂದು ಅಭಿಪ್ರಾಯಪಟ್ಟರು.ಫಸಲು ಸಾಲ ಮರುಪಾವತಿಯ ಅವಧಿಯನ್ನು ಸರ್ಕಾರ ಆಗಸ್ಟ್ ಅಂತ್ಯದವರೆಗೆ ವಿಸ್ತರಿಸಿದೆ. ಆದರೆ, ಕಳೆÉದ ಎರಡು ವರ್ಷಗಳಲ್ಲಿ ಪ್ರಾಕೃತಿಕ ವಿಕೋಪದಿಂದ ಕಂಗೆಟ್ಟಿದ್ದ ಕೊಡಗಿನ ರೈತರು ಇದೀಗ ಕೋವಿಡ್ 19 ಲಾಕ್ ಡೌನ್‍ನಿಂದಾಗಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲಾಗದೆ, ನಷ್ಟ ಅನುಭವಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಸಾಲ ಮರುಪಾವತಿಸುವಂತೆ ಸರ್ಕಾರ ಸೂಚಿಸಿರುವುದು ಅವೈಜ್ಞಾನಿಕ ಮತ್ತು ಅಮಾನವೀಯವೆಂದು ಉಮೇಶ್ ಆರೋಪಿಸಿದರು.
ಕೇಂದ್ರ ಸರ್ಕಾರ ಘೋಷಿಸಿದ 20 ಲಕ್ಷ ಕೋಟಿ ವಿಶೇಷ ಪ್ಯಾಕೇಜ್‍ನಿಂದ ಕೊಡಗಿನ ರೈತರಿಗೆ ಯಾವುದೇ ಪ್ರಯೋಜನವಾಗಿಲ್ಲ. ಕನಿಷ್ಟ ಈ ಪ್ಯಾಕೇಜಿನಿಂದ ರೈತರ ಸಾಲ ಮನ್ನಾ ಆಗಬಹುದೆನ್ನುವ ನಿರೀಕ್ಷೆಯೂ ಹುಸಿಯಾಗಿದೆ. ರೈತರು ಹತ್ತು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ನೆರವಿಗೆ ಬರುತ್ತಿಲ್ಲ. ರೈತರ ಸಂಕಷ್ಟವನ್ನು ಯಾರ ಬಳಿ ಹೇಳಿಕೊಳ್ಳಬೇಕೆನ್ನುವುದೆ ಪ್ರಶ್ನೆಯಾಗಿ ಉಳಿದಿದೆ ಎಂದು ಬೇಸರ ವ್ಯಕ್ತಪಡಿಸಿದರು.
(ಮೊದಲ ಪುಟದಿಂದ) ತಾವು ಅಧಿಕಾರಕ್ಕೆ ಬಂದಲ್ಲಿ ಡಾ.ಸ್ವಾಮಿನಾಥನ್ ವರದಿಯನ್ನು ಜಾರಿಗೆ ತರುವುದಾಗಿ ಬಿಜೆಪಿ ಚುನಾವಣಾ ಪೂರ್ವದಲ್ಲಿ ಘೋಷಿಸಿತ್ತು. ಆದರೆ, ಕಳೆದ ಆರು ವರ್ಷಗಳಲ್ಲಿ ಈ ನಿಟ್ಟಿನಲ್ಲಿ ಯಾವುದೇ ಪ್ರಯತ್ನ ನಡೆದಿಲ್ಲ. ಪರಿಣಾಮವಾಗಿ ದೇಶದಲ್ಲಿ ರೈತರ ಆತ್ಮಹತ್ಯೆ ಪ್ರಮಾಣ ವರ್ಷದಿಂದ ವರ್ಷಕ್ಕೆ ಅಧಿಕಗೊಳ್ಳುತ್ತಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕಿಸಾನ್ ಘಟಕದ ರಾಜ್ಯ ಪದಾಧಿಕಾರಿ ಕೆ.ಎಸ್. ಗೋಪಾಲಕೃಷ್ಣ, ಮಡಿಕೇರಿ ಬ್ಲಾಕ್ ಅಧ್ಯಕ್ಷ ಮಂದ್ರೀರ ಮೋಹನ್ ದಾಸ್, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಕೆ. ತೀರ್ಥ ಪ್ರಸಾದ್, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಚೇರಂಡ ಮೋಹನ್ ಹಾಗೂ ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷ ಬಸವರಾಜು ಉಪಸ್ಥಿತರಿದ್ದರು.