ಮಡಿಕೇರಿ, ಜೂ. 13: ಹದಿನಾಲ್ಕು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಶಿಕ್ಷಣ ನೀಡಬೇಕು. ಯಾವುದೇ ಕಾರಣಕ್ಕೂ ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಬಾರದು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರ್ ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ನಗರಸಭೆ, ಪೊಲೀಸ್ ಇಲಾಖೆ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಇವರ ಸಂಯುಕ್ತ ಆಶ್ರಯದಲ್ಲಿ ‘ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ’ ಪ್ರಯುಕ್ತ ಶುಕ್ರವಾರ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ‘ಜನಜಾಗೃತಿ’ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಷ್ಟ್ರದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಬೇಕು. ಬಾಲಕರನ್ನು ದುಡಿಸಿಕೊಳ್ಳಬಾರದು, ಜೀವನ ರೂಪಿಸಿಕೊಳ್ಳಲು ಶಿಕ್ಷಣ ಅತ್ಯವಶ್ಯಕ. ಶಿಕ್ಷಣದಿಂದ ಮಾತ್ರ ಒಳ್ಳೆಯ ಪ್ರಜೆಗಳನ್ನು ಕಾಣಲು ಸಾಧ್ಯ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾತನಾಡಿ ಸರ್ಕಾರ ವಿದ್ಯಾರ್ಥಿ ನಿಲಯ, ವಸತಿ ಶಾಲೆಗಳು ಹೀಗೆ ಹಲವು ಸೌಲಭ್ಯಗಳನ್ನು ಕಲ್ಪಿಸಿದ್ದು, ಅವುಗಳನ್ನು ಬಳಸಿಕೊಂಡು ಮಕ್ಕಳು ಶಿಕ್ಷಣ ಪಡೆಯುವಂತಾಗಬೇಕು ಎಂದು ಸಲಹೆ ಮಾಡಿದರು.
ಜಿಲ್ಲೆಯಲ್ಲಿ ಅಲ್ಲಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ಕಾಣಬಹುದಾಗಿದೆ. 14 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಶಿಕ್ಷಣ ನೀಡಬೇಕು. ಬಾಲ ಕಾರ್ಮಿಕರು ಕಂಡುಬಂದಲ್ಲಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತಾಗಬೇಕು ಎಂದು ಕೋರಿದರು.
ಕಾರ್ಮಿಕ ಅಧಿಕಾರಿ ಎಂ.ಎಂ ಯತ್ನಟ್ಟಿ ಮಾತನಾಡಿ ಮಕ್ಕಳನ್ನು ದುಡಿಯಲು ಹಚ್ಚದೇ ಶಾಲೆಗೆ ಸೇರಿಸಿ, ಭವ್ಯ ಭವಿಷ್ಯ ಕೊಡಿಸಬೇಕು. ಸಮಾನತೆ ಸಾರುವಲ್ಲಿ ಅವರಿಗೆ ಅವಕಾಶ ಕಲ್ಪಿಸಬೇಕು. ಕುಟುಂಬದ ಬಾಲರೆಂದು ತಿಳಿದು ಸಮಾಜದ ಅನಿಷ್ಟವಾದ ಬಾಲ ಕಾರ್ಮಿಕ ಪದ್ಧತಿ ತೊಡೆದು ಹಾಕಬೇಕು ಎಂದರು.
ಬಾಲ್ಯಾವಸ್ಥೆಯ ಮತ್ತು ಕಿಶೋರಾವಸ್ಥೆಯ ಬಾಲಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ-1986 ರ ಹೊಸ ತಿದ್ದುಪಡಿ ಕಾಯ್ದೆ-2016 ರ ಕಾಯ್ದೆಯಲ್ಲಿ 14 ರಿಂದ 18 ವರ್ಷದ ಒಳಗಿನ ಮಕ್ಕಳನ್ನು ಅಪಾಯಕಾರಿ ವೃತ್ತಿ/ ಪ್ರಕ್ರಿಯೆಗಳಲ್ಲಿ ಉದ್ಯೋಗ ಮಾಡುವುದು ಸಂಪೂರ್ಣ ನಿಷೇಧಿಸಲಾಗಿದೆ. ಕಾನೂನು ಮೀರಿ ಕೆಲಸಕ್ಕೆ ನೇಮಿಸಿಕೊಂಡಲ್ಲಿ ಅಂತವರ ವಿರುದ್ಧ 2 ವರ್ಷ ಜೈಲು ಶಿಕ್ಷೆ 50 ಸಾವಿರ ರೂ. ಗಳ ವರೆಗೆ ದಂಡ ವಿಧಿಸಲಾಗುತ್ತದೆ.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಅರುಂಧತಿ, ಲೀನಾ, ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಯಪ್ಪ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಶಿರಜ್ ಅಹ್ಮದ್, ಲಕ್ಷ್ಮೀಶ್ ಇತರರು ಇದ್ದರು.