ಸಿದ್ದಾಪುರ, ಜೂ. 13: ನೆಲ್ಲಿಹುದಿಕೇರಿ ಗ್ರಾ.ಪಂ. ವ್ಯಾಪ್ತಿಯ ನದಿ ತೀರದ ನಿವಾಸಿಗಳಿಗೆ ಶಾಶ್ವತ ಸೂರು ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿ ನೆಲ್ಲಿಹುದಿಕೇರಿಯ ಸಂತ್ರಸ್ತರ ಹೋರಾಟ ಸಮಿತಿ ವತಿಯಿಂದ ನೆಲ್ಲಿಹುದಿಕೇರಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಹೋರಾಟ ಸಮಿತಿ ಅಧ್ಯಕ್ಷ ಪಿ.ಆರ್. ಭರತ್ ಮಾತನಾಡಿ, ಕಳೆದ ಎರಡು ವರ್ಷಗಳಿಂದ ಪ್ರವಾಹಕ್ಕೆ ಸಿಲುಕಿ ನದಿ ತೀರದ ನೂರಾರು ಮನೆಗಳು ಹಾನಿಗೊಳಗಾಗಿತ್ತು. ಈ ಹಿನ್ನೆಲೆ ಮನೆ ಕಳೆದುಕೊಂಡ ಸಂತ್ರಸ್ತರು ಮೂರು ತಿಂಗಳು ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದಿದ್ದರು. ಈ ಸಂದರ್ಭ ಸಂತ್ರಸ್ತರು ತಮಗೆ ಪುನರ್ವಸತಿ ಕಲ್ಪಿಸಿಕೊಡುವಂತೆ ಸರ್ಕಾರಕ್ಕೆ ಹಾಗೂ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದರು.

ಆದರೆ ಇದೀಗ ವರ್ಷವೇ ಕಳೆದರೂ ಈವರೆಗೂ ಸಂತ್ರಸ್ತರಿಗೆ ಜಿಲ್ಲಾಡಳಿತವು ಪುನರ್ವಸತಿ ಕಲ್ಪಿಸಿಕೊಡದೇ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರಲ್ಲದೆ, ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭ ಸಂತ್ರಸ್ತರ ಹೋರಾಟ ಸಮಿತಿಯ ವತಿಯಿಂದ ಗ್ರಾ.ಪಂ. ಲೆಕ್ಕಾಧಿಕಾರಿಗೆ ಮನವಿ ಪತ್ರವನ್ನು ನೀಡಿದರು. ಪ್ರತಿಭಟನೆಯಲ್ಲಿ ಸಂತ್ರಸ್ತರ ಹೋರಾಟ ಸಮಿತಿಯ ಪ್ರಮುಖರಾದ ಸಫಿಯಾ, ಮಣಿ ಮೊಹಮ್ಮದ್, ಟಿ.ಟಿ. ಉದಯ ಕುಮಾರ್, ಅನ್ನಮ್ಮ, ಸಂಗೀತ ಇನ್ನಿತರರು ಹಾಜರಿದ್ದರು.