ಸೋಮವಾರಪೇಟೆ, ಜೂ. 17: ಜಿಲ್ಲಾಡಳಿತ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಮಾಜ ಕಲ್ಯಾಣ ಇಲಾಖೆ, ಪಟ್ಟಣ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆಯ ಜಾಗೃತಿ ಜಾಥಾ ಪಟ್ಟಣದಲ್ಲಿ ನಡೆಯಿತು.

ಪ.ಪಂ. ಮುಖ್ಯಾಧಿಕಾರಿ ನಾಚಪ್ಪ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986ರಂತೆ ಅನ್ವಯ ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವದು ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವದು ಶಿಕ್ಷಾರ್ಹ ಅಪರಾಧ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರಾದ ಆರ್. ಸಿರಾಜ್ ಅಹ್ಮದ್ ಹೇಳಿದರು.

ಈ ಸಂದರ್ಭ ಸೋಮವಾರಪೇಟೆ ಕಾರ್ಮಿಕ ನಿರೀಕ್ಷಕರಾದ ಕೆ.ಎನ್. ಲೀನಾ, ಶಿಕ್ಷಣ ಸಂಯೋಜಕರಾದ ರಾಧಕೃಷ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು. ನಂತರ ಬೇಳೂರು, ಕಾರೇಕೊಪ್ಪ, ಬಜೆಗುಂಡಿ, ಕುಸುಬೂರು, ಕೋವರ್‍ಕೊಲ್ಲಿ, ಯಡವನಾಡು, ಬಜೆಗುಂಡಿ, ಬಳಗುಂದ, ಕೂಡಿಗೆ, ಕೂಡುಮಂಗಳೂರು, ಕುಶಾಲನಗರ ವ್ಯಾಪ್ತಿಯಲ್ಲಿ ಜಾಥಾ ನಡೆಯಿತು.