ಮಡಿಕೇರಿ, ಜೂ. 17: ದೇಶ ದಾದ್ಯಂತ ಲಾಕ್ಡೌನ್ ಘೋಷಣೆ ಯಾದ ಬಳಿಕ ಮುಂದೂಡಲ್ಪಟ್ಟ ದ್ವಿತೀಯ ಪಿ.ಯು.ಸಿ ಇಂಗ್ಲಿಷ್ ಪರೀಕ್ಷೆಯು ತಾ. 18 ರಂದು (ಇಂದು) ನಡೆಯಲಿದೆ. ಸ್ಯಾನಿಟೈಸರ್, ಮಾಸ್ಕ್ ಹಾಗೂ ಇತರ ಎಲ್ಲಾ ಸ್ವಚ್ಛತಾ ಸೌಲಭ್ಯಗಳೊಂದಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ, ವಿದ್ಯಾಸಂಸ್ಥೆಗಳು ಸೇರಿದಂತೆ ಈ ಬಾರಿ ಆರೋಗ್ಯ ಇಲಾಖೆಯ ಸಹಕಾರದೊಂದಿಗೂ ಆತಂಕವಿಲ್ಲದೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೆ ಪರೀಕ್ಷೆ ಎದುರಿಸುವಂತೆ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶಿವಲಿಂಗ ಶೆಟ್ಟಿ ಅವರು ತಿಳಿಸಿದ್ದಾರೆ.ತಾ. 18 ರಂದು (ಇಂದು) ನಡೆಯಲಿರುವ ಇಂಗ್ಲಿಷ್ ಪರೀಕ್ಷೆಗೆ ಜಿಲ್ಲೆಯಾದ್ಯಂತ ಒಟ್ಟು 16 ಪರೀಕ್ಷಾ ಕೇಂದ್ರಗಳು ಎಲ್ಲಾ ಸ್ವಚ್ಛತಾ ಸೌಲಭ್ಯ ಗಳೊಂದಿಗೆ ಸಿದ್ಧವಾಗಿವೆ. ಒಟ್ಟು 5,927 ವಿದ್ಯಾರ್ಥಿಗಳು ಪರೀಕ್ಷೆ ಬರೆ ಯಲಿದ್ದು, ಇದರಲ್ಲಿ 477 ವಿದ್ಯಾರ್ಥಿ ಗಳು ಹೊರಜಿಲ್ಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವವರಾಗಿದ್ದು, ಅವರಿಗೂ ಜಿಲ್ಲೆಯಲ್ಲಿಯೇ ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಲಾಗಿದೆ. (ಮೊದಲ ಪುಟದಿಂದ) ಪರೀಕ್ಷೆಗೂ ಮುನ್ನ ಆರೋಗ್ಯ ತಪಾಸಣೆ ಸೇರಿದಂತೆ ಪರೀಕ್ಷೆಗೆ ಸಂಬಂಧಪಟ್ಟ ದಾಖಲಾತಿಗಳನ್ನು ಪರಿಶೀಲಿಸಬೇಕಾದುದರಿಂದ ಆದಷ್ಟು ಬೇಗನೆ (8.30ಕ್ಕೆ) ಪರೀಕ್ಷಾ ಕೇಂದ್ರ ತಲುಪುವಂತೆ ಕೂಡ ಅವರು ‘ಶಕ್ತಿ’ಯ ಮೂಲಕ ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದ್ದಾರೆ.
ಕೊಠಡಿಗಳಲ್ಲಿ ಸಾಮಾಜಿಕ ಅಂತರ
ಪರೀಕ್ಷಾ ಕೇಂದ್ರದ ಪ್ರತಿಯೊಂದು ಕೊಠಡಿಗಳಲ್ಲಿ ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಆದಷ್ಟು ಕಡಿಮೆ ವಿದ್ಯಾರ್ಥಿಗಳನ್ನು ಕೂರಿಸಲಾಗುವುದು. ದೊಡ್ಡ ಕೊಠಡಿಗಳಲ್ಲಿ 24 ಹಾಗೂ ಸಣ್ಣ ಕೊಠಡಿಗಳಲ್ಲಿ 12 ವಿದ್ಯಾರ್ಥಿಗಳು, ಒಂದು ಬೆಂಚಿನಲ್ಲಿ 2 ವಿದ್ಯಾರ್ಥಿಗಳಂತೆ ಕುಳಿತು ಪರೀಕ್ಷೆ ಬರೆಯುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಜ್ವರದ ಲಕ್ಷಣಗಳು ಇದ್ದಲ್ಲಿ ಪ್ರತ್ಯೇಕ ವ್ಯವಸ್ಥೆ
ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವಾಗ ಅವರುಗಳ ದೇಹದ ಉಷ್ಣಾಂಶ ತಪಾಸಣೆ ಮಾಡಲಾಗುವುದು. ಈ ಸಂದರ್ಭ ಜ್ವರದ ಲಕ್ಷಣಗಳು ಕಂಡು ಬಂದಲ್ಲಿ ಪ್ರತ್ಯೇಕ ಕೊಠಡಿಗಳಲ್ಲಿ ಕೂರಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು. ಒಂದು ವೇಳೆ ಅತೀ ಹೆಚ್ಚು ಉಷ್ಣಾಂಶ ಕಾಣಿಸಿಕೊಂಡಲ್ಲಿ ಇಂದು ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ. ಮರುಪರೀಕ್ಷೆ ಸಂದರ್ಭ ಇಂತಹ ವಿದ್ಯಾರ್ಥಿಗಳನ್ನು ಮೊದಲನೆ ಅಭ್ಯರ್ಥಿಗಳೆಂದು ಪರಿಗಣಿಸಿ ಪರೀಕ್ಷೆಗೆ ಅವಕಾಶ ನೀಡಲಾಗುವುದು ಎಂದು ಶಿವಲಿಂಗ ಶೆಟ್ಟಿ ವಿವರಿಸಿದ್ದಾರೆ.
ಪರೀಕ್ಷಾ ಕೇಂದ್ರಕ್ಕೆ ಉಚಿತ ಬಸ್ ಸೇವೆ
ಲಾಕ್ಡೌನ್ನಿಂದ ಬಸ್ಗಳ ಸಂಚಾರ ಕೂಡ ಕಡಿಮೆಯಾಗಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉಚಿತ ಸರಕಾರಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಬಿಡುವ ಹಾಗೂ ಕೇಂದ್ರದಿಂದ ವಾಪಾಸ್ ಹಿಂತಿರುಗಿಸುವ ವ್ಯವಸ್ಥೆ ಕಲ್ಪಿಸಲಾಗಿದ್ದು ಒಟ್ಟು ಸುಮಾರು 2,000 ದಷ್ಟು ಅವಶ್ಯವಿರುವ ವಿದ್ಯಾರ್ಥಿಗಳು ಬಸ್ ಸೌಲಭ್ಯ ಬಳಸಲಿದ್ದಾರೆ. ಉಳಿದ ವಿದ್ಯಾರ್ಥಿಗಳು ಸ್ವಂತ ವ್ಯವಸ್ಥೆಯಲ್ಲಿ ಪರೀಕ್ಷಾ ಕೇಂದ್ರಕ್ಕೆ ಬರಲಿದ್ದಾರೆ. ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿಯೂ ಕೊಡಗು ಜಿಲ್ಲೆಯ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು ಈ ಪೈಕಿ ಒಟ್ಟು 32 ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ಶಿವಲಿಂಗ ಶೆಟ್ಟಿ ಮಾಹಿತಿ ನೀಡಿದರು.
ಕಳೆದ ವರ್ಷ ಒಟ್ಟು 17 ಕೊಠಡಿಗಳಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ ಈ ವರ್ಷ ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಒಟ್ಟು 23 ಕೊಠಡಿಗಳಲ್ಲಿ 500 ವಿದ್ಯಾರ್ಥಿಗಳಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ನಗರದ ಸಂತ ಮೈಕಲರ ಕಾಲೇಜಿನ ಪ್ರಾಂಶುಪಾಲೆ ಪ್ರೇಮಲತಾ ಅವರು ಮಾಹಿತಿ ನೀಡಿದ್ದಾರೆ.
ಹೊರಜಿಲ್ಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 140 ವಿದ್ಯಾರ್ಥಿಗಳಿಗೆ ಮಡಿಕೇರಿ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಒಟ್ಟು 641 ಮಂದಿ ಇಂದು ಇಲ್ಲಿ ಪರೀಕ್ಷೆ ಬರೆಯಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ವಿಜಯನ್ ತಿಳಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೊಠಡಿಗಳನ್ನು ಸ್ವಚ್ಛಗೊಳಿಸಲಾಗಿದೆ. ಶಾಲೆಯ ಮುಂಭಾಗದಲ್ಲಿದ್ದ ಗಿಡಗಂಟಿಗಳನ್ನು ತೆರವುಗೊಳಿಸಲಾಗಿದೆ ಎಂದು ಕೂಡ ವಿಜಯನ್ ಮಾಹಿತಿ ನೀಡಿದ್ದಾರೆ.
ಕುಶಾಲನಗರದಲ್ಲಿ ಪಿ.ಯು ಪರೀಕ್ಷೆಗೆ ಸಿದ್ಧತೆ
ಕುಶಾಲನಗರ ಪರೀಕ್ಷಾ ಕೇಂದ್ರಗಳಲ್ಲಿ ಪೂರ್ವಭಾವಿ ಸಿದ್ಧತೆಗಳು ಪೂರ್ಣಗೊಂಡಿವೆ. ಕುಶಾಲನಗರ ಸರಕಾರಿ ಪದವಿಪೂರ್ವ ಕಾಲೇಜು ಜಿಲ್ಲೆಯಲ್ಲಿಯೇ ಅತಿ ದೊಡ್ಡ ಪರೀಕ್ಷಾ ಕೇಂದ್ರವಾಗಿದ್ದು ಒಟ್ಟು 860 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ 21 ವಿದ್ಯಾರ್ಥಿಗಳು ಹೊರ ಜಿಲ್ಲೆಯ ವಿದ್ಯಾರ್ಥಿಗಳಾಗಿದ್ದು ಇವರಿಗೆ ಪ್ರತ್ಯೇಕ ಕೊಠಡಿಗಳನ್ನು ಕಲ್ಪಿಸಲಾಗಿದೆ. ಇದರೊಂದಿಗೆ ಇನ್ನೆರೆಡು ಬ್ಲಾಕ್ಗಳನ್ನು ಪರೀಕ್ಷಾ ಕೇಂದ್ರಗಳನ್ನಾಗಿ ಮಾಡಲಾಗಿದ್ದು ಕುಶಾಲನಗರ ಕನ್ನಡ ಭಾರತಿ ಪದವಿಪೂರ್ವ ಕಾಲೇಜಿನಲ್ಲಿ 7 ಕೊಠಡಿಗಳಲ್ಲಿ 168 ವಿದ್ಯಾರ್ಥಿಗಳು, ಎರಡನೇ ಬ್ಲಾಕ್ ವಿವೇಕಾನಂದ ಪಿಯು ಕಾಲೇಜು ಕೇಂದ್ರದಲ್ಲಿ 7 ಕೊಠಡಿಗಳಲ್ಲಿ 171 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಉಳಿದಂತೆ ಸರಕಾರಿ ಪಪೂ ಕಾಲೇಜಿನ ಕೇಂದ್ರದಲ್ಲಿ 21 ಕೊಠಡಿಗಳಲ್ಲಿ 500 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಿದ್ದತೆ ನಡೆದಿದೆ. ಪ್ರತಿ ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕ ಸಿ.ಎಂ. ಮಹಾಲಿಂಗಯ್ಯ ಮಾಹಿತಿ ನೀಡಿದ್ದಾರೆ.
ವಿದ್ಯಾರ್ಥಿಗಳು ಬೆಳಗ್ಗೆ 8.30 ಕ್ಕೆ ಕೇಂದ್ರಕ್ಕೆ ಹಾಜರಾಗಬೇಕಾಗಿದ್ದು ಪ್ರತಿ ವಿದ್ಯಾರ್ಥಿಗಳು ತಮ್ಮ ಗುರುತಿನ ಚೀಟಿ ಮತ್ತು ಹಾಲ್ ಟಿಕೆಟ್ ತರಬೇಕು. ಕುಡಿಯಲು ನೀರು ಮನೆಯಿಂದಲೇ ತರಬೇಕು. ಉಳಿದಂತೆ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಮಾರ್ಗದರ್ಶನ ನೀಡಲು ಕೇಂದ್ರದಲ್ಲಿ ಕ್ರಮಕೈಗೊಳ್ಳಲಾಗಿದೆ ಎಂದು ಮಹಾಲಿಂಗಯ್ಯ ತಿಳಿಸಿದ್ದಾರೆ. ಇದೇ ರೀತಿ ಕೂಡಿಗೆಯಲ್ಲಿ ಎರಡು ಕಾಲೇಜುಗಳನ್ನು ಪರೀಕ್ಷಾ ಕೇಂದ್ರಗಳನ್ನಾಗಿ ಸಿದ್ಧಪಡಿಸಲಾಗಿದೆ.