ಕೂಡಿಗೆ, ಜೂ. 19: ಸರಕಾರದ ಅನುದಾನ ಗ್ರಾಮಾಂತರ ಪ್ರದೇಶಗಳಲ್ಲಿ ಸಮರ್ಪಕವಾಗಿ ಬಳಕೆಯಾದರೆ ಸಮುದಾಯದ ಬೆಳವಣಿಗೆ ಮತ್ತು ಗ್ರಾಮದ ಅಭಿವೃದ್ಧಿ ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಹೇಳಿದರು.
ಹೆಬ್ಬಾಲೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹುಲುಸೆ ಗ್ರಾಮದಲ್ಲಿ ರೂ. 12.50 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡÀ ಅಂಬೇಡ್ಕರ್ ಭವನವನ್ನು ಉದ್ಘಾಟಿಸಿ ಮಾತನಾಡಿದರು. ದೇಶದ ಪ್ರಧಾನ ಮಂತ್ರಿಗಳ ಕನಸು ನನಸಾಗಲು ಗ್ರಾಮಗಳಿಗೆ ವಿನಿಯೋಗಿಸುವ ಅನುದಾನದ ಪ್ರಗತಿ ಅಭಿವೃದ್ಧಿಗೆ ಪೂರಕವಾಗಿರುತ್ತದೆ ಜಗತ್ತಿನಲ್ಲಿ ಹರಡಿರುವ ಕೊರೊನಾ ಓಡಿಸಲು ಎಲ್ಲರೂ ಕೈಜೋಡಿಸೋಣ ಎಂದರು.
ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್ ಮಾತನಾಡಿ, ಸಮುದಾಯದವರು ಒಗ್ಗೂಡಿ ಗ್ರಾಮದ ಅಭಿವೃದ್ಧಿ ಕೆಲಸಗಳಲ್ಲಿ ಭಾಗವಹಿಸಿ ತಮ್ಮ ಸೇವೆ ಮಾಡಿದಾಗ ಗ್ರಾಮವು ಮುಂದುವರೆಯಲು ಸಾಧ್ಯವಾಗುತ್ತದೆ ಎಂದರು.
ಹೆಬ್ಬಾಲೆ ಜಿಲ್ಲಾ ಪಂಚಾಯಿತಿ ಸದಸ್ಯ ಶ್ರೀನಿವಾಸ ಮಾತನಾಡಿ, ವಿಧಾನ ಪರಿಷತ್ ಸದಸ್ಯರ ಪ್ರಯತ್ನದಿಂದ ಉತ್ತಮ ಗುಣಮಟ್ಟದ ಕಟ್ಟಡ ನಿರ್ಮಾಣವಾಗಿದೆ ಇದನ್ನು ಬಳಸುವವರು ಶುಚಿತ್ವವನ್ನು ಕಾಪಾಡಿಕೊಂಡು ಗ್ರಾಮದ ಎಲ್ಲಾ ಕಾರ್ಯಕ್ರಮಗಳಿಗೆ ಬಳಸುವಂತಾಗಬೇಕು ಎಂದರು. ಸಮಾಜ ಕಲ್ಯಾಣ ಇಲಾಖೆಯ ಅನುದಾನದಲ್ಲಿ ನಿರ್ಮಾಣವಾಗಿದೆ ಸದುಪಯೋಗ ಪಡೆದುಕೊಳ್ಳಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೆಬ್ಬಾಲೆ ಪಂಚಾಯಿತಿ ಅಧ್ಯಕ್ಷೆ ಲತಾ ಸತೀಶ್ ವಹಿಸಿದ್ದರು. ಈ ಸಂದರ್ಭದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸ್ಥಳ ದಾನ ನೀಡಿದ ರಾಜಣ್ಣ ಅವರನ್ನು ಅತಿಥಿಗಳು ಸನ್ಮಾನಿಸಿದರು.
ಹೆಬ್ಬಾಲೆ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ವೆಂಕಟೇಶ್, ವಿಜಯಾ, ಚೇತನ್, ಶಿವನಂಜಪ್ಪ, ಕೂಡಿಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗಿರೀಶ್ ಕುಮಾರ್, ಹೆಬ್ಬಾಲೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಾಜಶೇಖರ್, ಅಭಿವೃದ್ಧಿ ಅಧಿಕಾರಿ ರಾಖೇಶ್ ಸೇರಿದಂತೆ ಗ್ರಾಮಸ್ಥರು ಇದ್ದರು.