ಕೊರೊನಾ ನಿಯಂತ್ರಿಸಲು ಸಿಎಂ ಸೂಚನೆ

ಬೆಂಗಳೂರು, ಜೂ. 22 : ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಚಿವ ಸಂಪುಟ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿ ಯಡಿಯೂರಪ್ಪ, ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಹದಿನೈದು ದಿನಗಳಲ್ಲಿ ಅತಿ ಹೆಚ್ಚು ಮುನ್ನೆಚ್ಚರಿಕೆಯ ಕ್ರಮಗಳನ್ನು ವಹಿಸಿದರೆ ಮಾತ್ರ, ಸೋಂಕು ಹರಡುವ ಪ್ರಮಾಣವನ್ನು ನಿಯಂತ್ರಿಸಲು ಸಾಧ್ಯ. ಈ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಶ್ರಮವಹಿಸಬೇಕೆಂದು ಆದೇಶಿಸಿದರು. ಬೆಂಗಳೂರು ನಗರದಲ್ಲಿ ಹಾಗೂ ಇತರ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿ ಪತ್ತೆಯಾಗಿರುವ ಪ್ರದೇಶಗಳಲ್ಲಿ ಲಾಕ್ ಡೌನ್ ಪ್ರಕ್ರಿಯೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಬೇಕು. ಕ್ವಾರಂಟೈನ್ ಉಲ್ಲಂಘಿಸುವ ವ್ಯಕ್ತಿಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕು. ಅಗತ್ಯ ಬಿದ್ದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಸೂಚಿಸಿದರು. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ದರ ನಿಗದಿ ಮಾಡುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿರುವ ಪ್ರಕರಣಗಳಲ್ಲಿ ಸೋಂಕಿತರಿಗೆ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಯಿತು. ಸಾಂಸ್ಥಿಕ ಕ್ವಾರಂಟೈನ್ ಗೆ ಒಳಗಾಗಿ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳು ಮತ್ತಿತರ ಸರ್ಕಾರಿ ಸಂಸ್ಥೆಗಳಲ್ಲಿ ಇರುವವರಿಗೆ ಅಗತ್ಯ ಮೂಲಸೌಕರ್ಯ ಒದಗಿಸುವಂತೆ ಮುಖ್ಯಮಂತ್ರಿ ನಿರ್ದೇಶನ ನೀಡಿದರು.

ಸಚಿವ ಕೆ.ಸುಧಾಕರ್ ತಂದೆಗೆ ಕೋವಿಡ್

ಬೆಂಗಳೂರು, ಜೂ. 22: ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಅವರ ತಂದೆ ಹಾಗೂ ಮನೆ ಕೆಲಸದವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮನೆ ಕೆಲಸದವರಿಗೆ ಸೋಂಕು ದೃಢಪಟ್ಟಿತ್ತು. ಇಂದು ಬೆಳಗ್ಗೆ ಸುಧಾಕರ್ ಅವರ 82 ವರ್ಷ ಪ್ರಾಯದ ತಂದೆಯ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು ಕೆಮ್ಮು ಮತ್ತು ಉಸಿರಾಟದ ಸಮಸ್ಯೆಯಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸುಧಾಕರ್ ಅವರ ತಂದೆಯ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷಿಸಿದಾಗ ಅವರಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಸುಧಾಕರ ಮನೆ ಕೆಲಸದವರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಮನೆಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ಕೊಟ್ಟಿದ್ದಾರೆ. ಸುಧಾಕರ್ ಅವರು ತಾವು ಸ್ವಯಂ ಕ್ವಾರಂಟೈನ್ ಆಗುವುದಾಗಿ ಹೇಳಿದ್ದು ಮುಖ್ಯಮಂತ್ರಿಗಳ ಜೊತೆಗಿನ ಸಭೆಯಿಂದ ಹೊರಗುಳಿದಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಸುಧಾಕರ್, ನನ್ನ ತಂದೆಯವರ ಕೋವಿಡ್ ಪರೀಕ್ಷಾ ವರದಿಯಲ್ಲಿ ಸೋಂಕು ದೃಢಪಟ್ಟಿದೆ. ಕುಟುಂಬದ ಇತರ ಸದಸ್ಯರ ವರದಿಗಾಗಿ ಆತಂಕದಿಂದ ಕಾಯುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ಇರಲಿ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಸೋಂಕಿಗೆ ಐವರ ಸಾವು

ಬೆಂಗಳೂರು, ಜೂ. 22: ರಾಜ್ಯದಲ್ಲಿ ಹೊಸದಾಗಿ 249 ಕೊರೋನಾ ಪ್ರಕರಣಗಳು ವರದಿಯಾಗಿದ್ದು, ಮತ್ತೆ ಐವರು ಮೃತಪಟ್ಟಿದ್ದಾರೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9399ಕ್ಕೇರಿಕೆಯಾಗಿದ್ದು, 146 ಮಂದಿ ಮೃತಪಟ್ಟಿದ್ದಾರೆ. 5730 ಮಂದಿ ಗುಣಮುಖರಾಗಿದ್ದು, 3523 ಸಕ್ರಿಯ ಪ್ರಕರಣಗಳಿದ್ದು, 80 ರೋಗಿಗಳಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. 249 ಸೋಂಕಿತರ ಪೈಕಿ 50 ಮಂದಿ ಅಂತಾರಾಜ್ಯ ಮತ್ತು 11 ಮಂದಿ ಅಂತಾರಾಷ್ಟ್ರೀಯ ಪ್ರಯಾಣದ ಇತಿಹಾಸ ಹೊಂದಿದ್ದಾರೆ. ಬೆಂಗಳೂರು ನಗರದಲ್ಲಿ 126, ಕಲಬುರಗಿಯಲ್ಲಿ 27, ವಿಜಯಪುರದಲ್ಲಿ 15, ಉಡುಪಿಯಲ್ಲಿ 14, ದಕ್ಷಿಣ ಕನ್ನಡದಲ್ಲಿ 12, ದಾವಣಗೆರೆಯಲ್ಲಿ 9, ಉತ್ತರಕನ್ನಡ, ಬಾಗಲಕೋಟೆಯಲ್ಲಿ ತಲಾ 6, ಬೀದರ್, ಚಿಕ್ಕಮಗಳೂರಿನಲ್ಲಿ ತಲಾ 5, ಧಾರವಾಡ, ಬೆಂಗಳೂರು ಗ್ರಾಮಾಂತರದಲ್ಲಿ ತಲಾ 4, ರಾಮನಗರದಲ್ಲಿ ತಲಾ 3, ಚಿತ್ರದುರ್ಗ, ಕೋಲಾರ, ತುಮಕೂರು, ಕೊಡಗಿನಲ್ಲಿ ತಲಾ 2, ಯಾದಗಿರಿ, ಮೈಸೂರು, ಚಿಕ್ಕಬಳ್ಳಾಪುರ, ಗದಗ ಮತ್ತು ಕೊಪ್ಪಳದಲ್ಲಿ ತಲಾ 1 ಪ್ರಕರಣ ವರದಿಯಾಗಿವೆ.

ರೋಗಿಗಳ ಛಾಯಾಚಿತ್ರ ತೆಗೆದರೆ ಕ್ರಮ

ಬೆಂಗಳೂರು, ಜೂ.22 : ಇನ್ಮುಂದೆ ಅನುಮತಿ ಇಲ್ಲದೆಕೊರೊನಾ ಸೋಂಕಿತ ರೋಗಿಗಳ ಛಾಯಾಚಿತ್ರ ಸೆರೆ ಹಿಡಿಯದಂತೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಕೊರೊನಾ ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಸ್ಥಳೀಯರು ತಮ್ಮ ಮೊಬೈಲ್ ಗಳಲ್ಲಿ ಛಾಯಾಚಿತ್ರ ಸೆರೆಹಿಡಿಯುವುದು ಹೆಚ್ಚಾಗುತ್ತಿದ್ದು, ಅದು ಮಾಧ್ಯಮಗಳಲ್ಲೂ ಬಿತ್ತರವಾಗುತ್ತಿದೆ. ಹೀಗಾಗಿ ಈ ಕುರಿತು ಅನೇಕ ಜನ ದೂರು ನೀಡುತ್ತಿದ್ದಾರೆ. ಈ ರೀತಿ ಫೋಟೋ/ವಿಡಿಯೋ ಸೆರೆಹಿಡಿಯುವುದರಿಂದ ನಮ್ಮ ಖಾಸಗಿತನಕ್ಕೆ ಧಕ್ಕೆಯಾಗುತ್ತದೆ ಹಾಗೂ ಮುಜುಗರ ಉಂಟಾಗುತ್ತದೆ ಎಂದು ಅವರು ದೂರುತ್ತಿದ್ದಾರೆ. ಹೀಗಾಗಿ ಯಾರೂ ಅನುಮತಿ ಇಲ್ಲದೇ ಕೊರೊನಾ ರೋಗಿಗಳ ಛಾಯಾಚಿತ್ರ ಸೆರೆಹಿಡಿಯುವಂತಿಲ್ಲ. ಈ ನಿಯಮ ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.