ಮಡಿಕೇರಿ, ಜೂ.29: ಅನುಸೂಜಿತ ಜಾತಿ, ಅನುಸೂಚಿತ ಪಂಗಡಗಳ ಮೇಲಿನ ದೌರ್ಜನ್ಯಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಿಯಂತ್ರಿಸಲು ಹೆಚ್ಚಿನ ಕ್ರಮ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಅನುಸೂಜಿತ ಜಾತಿ, ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಹಾಗೂ ಸಫಾಯಿ ಕರ್ಮಚಾರಿಗಳ, ಮ್ಯಾನ್ಯುವಲ್ ಸ್ಕ್ಯಾವೆಂಜರ್ಸ್ಗಳ ಜಿಲ್ಲಾ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅರ್ಹ ಫಲಾನುಭವಿಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿಯವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಭಾರತಿ ಅವರು, ಕಳೆದ ಸಾಲಿನ ಸಭೆಯ ಅನುಪಾಲನ ವರದಿಯನ್ನು ಮಂಡಿಸಿದರು. ವೀರಾಜಪೇಟೆ ತಾಲೂಕಿನ ಆರ್ಜಿ ಗ್ರಾಮದಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸ್ಮಶಾನಕ್ಕಾಗಿ ಜಿಲ್ಲಾಧಿಕಾರಿಯವರ ಸೂಚನೆಯಂತೆ ಸೂಕ್ತ ಸ್ಥಳವನ್ನು ಗುರುತಿಸಲು ವೀರಾಜಪೇಟೆ ತಹಶೀಲ್ದಾರರೊಂದಿಗೆ ಚರ್ಚಿಸಿದ್ದು, ಕಾರ್ಯ ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದರು.ಇದರೊಂದಿಗೆ ಹಿಂದಿನ ಸಭೆಯಲ್ಲಿ ಚರ್ಚಿಸಿದಂತೆ ನಾಪೋಕ್ಲು ಮರಂದೋಡ ಪಂಚಾಯಿತಿ ವ್ಯಾಪ್ತಿಯ ಬಿದ್ದಂಡತಟ್ಟು, ಕೆರೆತಟ್ಟು, ಬಾಳೆಗುಂಡಿ ಹಾಗೂ ಅಡಿಯರ ಕಾಲೋನಿಯಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಎಲ್ಲಾ ಮನೆಗಳಿಗೆ ದೀನ ದಯಾಳ್ ಉಪಾದ್ಯಾಯ ಗ್ರಾಮ ಜ್ಯೋತಿ ಯೋಜನೆಯಡಿಯಲ್ಲಿ (ಮೊದಲ ಪುಟದಿಂದ) ಜೂನ್ 9 ರಂದು ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.
ಐಟಿಡಿಪಿ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಶಿವಕುಮಾರ್ ಮಾತನಾಡಿ, ವೀರಾಜಪೇಟೆ ತಾಲೂಕಿನ ತಟ್ಟೆಕೆರೆ ಗಿರಿಜನರ ಹಾಡಿ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸುವ ಸಂಬಂಧ ಜಿಲ್ಲಾಧಿಕಾರಿಯವರು ಪರಿಶೀಲಿಸಲು ತಿಳಿಸಿದ್ದರು. ಈ ಸಂಬಂಧ ಜೂನ್ 6 ರಂದು ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನದ ನಿರ್ದೇಶಕರು ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ವಿಚಾರವನ್ನು ಚರ್ಚಿಸಲಾಗಿದ್ದು, ಜಂಟಿ ತಪಾಸಣೆ ಕೈಗೊಂಡು ಈ ವಿಚಾರವನ್ನು ಕಾನೂನಾತ್ಮಕವಾಗಿ ಬಗೆಹರಿಸಲು ನಾಗರಹೊಳೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ತಿಳಿಸಲಾಗಿದೆ ಎಂದು ಮಾಹಿತಿ ನೀಡಿದರು.
ಅನುಸೂಚಿತ ಜಾತಿ ಅನುಸೂಚಿತ ಪಂಗಡಗಳ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಸಮಿತಿ ಸದಸ್ಯರಾದ ಪ್ರಕಾಶ್ ಅವರು ಮಾತನಾಡಿ, ಸಮುದಾಯದಲ್ಲಿ ದೌರ್ಜನ್ಯ ನಿಯಂತ್ರಣ ಕಾಯ್ದೆಯ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವುದು, ಶೋಷಣೆಗೊಳಗಾದವರಿಗೆ ಸಕಾಲದಲ್ಲಿ ನ್ಯಾ ಸಿಗುವಂತೆ ಅನುಕೂಲ ಮಾಡಿಕೊಡಬೇಕೆಂದು ಸಭೆಯ ಗಮನಕ್ಕೆ ತಂದರು.
ಇದಕ್ಕೆ ಪ್ರತಿಕ್ರಿಯಿಸಿದ ಭಾರತಿ ಅವರು, ಈಗಾಲೇ ಸಮಾಜ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆ ವತಿಯಿಂದ ಅನುಸೂಚಿತ ಜಾತಿ ಅನುಸೂಚಿತ ಪಂಗಡಗಳ ದೌರ್ಜನ್ಯ ನಿಯಂತ್ರಣ ಕಾಯ್ದೆಯ ಬಗ್ಗೆ ಸಮುದಾಯದವರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿದ್ದು, ದೌರ್ಜನ್ಯಕ್ಕೊಳಪಟ್ಟ ಸಮುದಾಯದವರಿಗೆ ಕಾನೂನು ರೀತಿ ಎಲ್ಲಾ ಬಗೆಯ ಸಹಕಾರವನ್ನು ನೀಡುತ್ತಿರುವುದಾಗಿ ಸಭೆಯ ಗಮನಕ್ಕೆ ತಂದರು.
ಸಮಿತಿ ಸದಸ್ಯ ಪ್ರಕಾಶ್ ಕುಟ್ಟ ಗ್ರಾಮದ ಬಳಿಯಿರುವ ಸಿಂಗೋನ ಕಾಲೋನಿಯಲ್ಲಿ ಪರಿಶಿಷ್ಟ ಪಂಗಡ ಹಾಗೂ ಪರಿಶಿಷ್ಟ ಸಮುದಾಯದ ವಸತಿ ರಹಿತರು ರಸ್ತೆ ಬದಿಯಲ್ಲಿ ತಾತ್ಕಾಲಿಕ ಮನೆಗಳನ್ನು ನಿರ್ಮಿಸಿಕೊಂಡು ಜೀವನ ನಡೆಸುತ್ತಿದ್ದು, ಅಂತಹವರಿಗೆ ವಸತಿ ಕಲ್ಪಿಸಿಕೊಡಬೇಕು ಹಾಗೂ ಜಿಲ್ಲೆಯಲ್ಲಿರುವ ಪರಿಶಿಷ್ಟ ಪಂಗಡ ಹಾಗೂ ಪರಿಶಿಷ್ಟ ಸಮುದಾಯದ ವಸತಿ ರಹಿತರಿಗೆ ವಸತಿ ಕಲ್ಪಿಸಿಕೊಡಬೇಕು ಎಂದು ಸಭೆಯ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ ಅವರು, ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಸದಸ್ಯ ಪ್ರಕಾಶ್ ಮರಂದೋಡ ಗ್ರಾಮದಲ್ಲಿ ಸುಮಾರು 35 ಕುಟುಂಬಗಳು ವಾಸವಿದ್ದು ಇವರಿಗೆ ವಾಸಿಸುವ ಸ್ಥಳದಲ್ಲಿಯೇ ಸಂಚಾರಿ ನ್ಯಾಯಬೆಲೆ ಅಂಗಡಿಮೂಲಕ ಪಡಿತರ ವಿತರಣೆ ಮಾಡುವಂತೆ ಸಭೆಗೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಆಹಾರ ಇಲಾಖೆಯ ಉಪನಿರ್ದೇಶಕರಿಗೆ, ಆಹಾರ ಇಲಾಖೆಯ ಆಯುಕ್ತರೊಂದಿಗೆ ಪತ್ರ ವ್ಯವಹಾರ ನಡೆಸಿ ಸಂಚಾರಿ ನ್ಯಾಯಬೆಲೆ ಪಡಿತರ ವಿತರಣೆಯ ಮೂಲಕ ಪಡಿತರ ವಿತರಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಜಿಲ್ಲೆಯಲ್ಲಿ ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣ ಹಾಗೂ ಪರಿಹಾರ ವಿತರಣೆ ಮತ್ತು ತೆಗೆದುಕೊಂಡ ಕ್ರಮಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.
ಸಫಾಯಿ ಕರ್ಮಚಾರಿಗಳ, ಮ್ಯಾನ್ಯುವಲ್ ಸ್ಕ್ಯಾವೆಂಜರ್ಸ್ಗಳ ಜಿಲ್ಲಾ ಜಾಗೃತಿ ಸಮಿತಿ ಸಭೆಗೆ ಸಂಬಂಧಿಸಿದ ಮಾಹಿತಿಯನ್ನು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೆಶಕರಾದ ಭಾರತಿ ಮಾಹಿತಿ ನೀಡುತ್ತಾ, ನಗರದ ಪೌರ ಕಾರ್ಮಿಕರಿಗೆ ವಸತಿ ಗೃಹ ನಿರ್ಮಿಸಲು ಕರ್ಣಂಗೇರಿ ಗ್ರಾಮದ ಉಕ್ಕುಡದಲ್ಲಿ 40 ಸೆಂಟ್ ಜಾಗವನ್ನು ಗುರುತಿಸಲಾಗಿದೆ ಎಂದು ನಗರ ಸಭೆ ಪೌರಾಯುಕ್ತರು ವರದಿ ನೀಡಿರುವುದಾಗಿ ಸಭೆಯ ಗಮನಕ್ಕೆ ತಂದರು.
ಇದಕ್ಕೆ ಪ್ರತಿಕ್ರಿಯಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ ಅವರು ಕರ್ಣಂಗೇರಿಯ ಉಕ್ಕುಡ ಗ್ರಾಮದಲ್ಲಿ ಗುರುತಿಸಿರುವ ಜಾಗದಲ್ಲಿ ಪೌರ ಕಾರ್ಮಿಕರಿಗೆ ನಿವೇಶನ ಹಂಚಿಕೆಗೆ ತುರ್ತಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪೌರ ಕಾರ್ಮಿಕರ ಮಕ್ಕಳಿಗೆ ಕೌಶಲ್ಯಾಧಾರಿತ ತರಬೇತಿ ನೀಡಲು ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವತಿಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು. ಸಮಿತಿ ಸದಸ್ಯ ಪ್ರಕಾಶ್ ಮಾತನಾಡಿ, ಸುಂಟಿಕೊಪ್ಪದ ಅಂಬೇಡ್ಕರ್ ಕಾಲೋನಿಯಲ್ಲಿ ಹಲವು ವರ್ಷಗಳಿಂದ ವಾಸಿಸುತ್ತಿರುವ ಪೌರ ಕಾರ್ಮಿಕರಿಗೆ ಇಂದಿಗೂ ಹಕ್ಕು ಪತ್ರ ದೊರೆತಿರುವುದಿಲ್ಲ ಎಂದು ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿಯವರು, ನಿಯಮಾನುಸಾರ ಪರಿಶೀಲಿಸಿ ಹಕ್ಕುಪತ್ರ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಡಿವೈಎಸ್ಪಿ ದಿನೇಶ್ ಕುಮಾರ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ರಾಮಚಂದ್ರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಾದ ಗೌರವ್ ಕುಮಾರ್ ಶೆಟ್ಟಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ಮಡಿಕೇರಿ ತಹಶೀಲ್ದಾರರಾದ ಮಹೇಶ್ ಇತರರು ಇದ್ದರು.