ಮಡಿಕೇರಿ, ಜು. 3: ಕೊಡಗು ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಕೊಡಗು ಮೂಲದ ವ್ಯಕ್ತಿಯೋರ್ವರು ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದು, ಮೃತ ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಕೊಡಗಿಗೆ ಸಂಬಂಧಿಸಿದಂತೆ ಕೊರೊನಾ ಸೋಂಕು ಪೀಡಿತ ವ್ಯಕ್ತಿಯ ಮೊದಲ ಸಾವಿನ ಪ್ರಕರಣ ಇದಾಗಿದೆ. ನಿನ್ನೆ ದಿನ ಜಿಲ್ಲೆಯ ಖಾಸಗಿ ಆಸ್ಪತ್ರೆಯಿಂದ ಮಂಗಳೂರಿನ ವೆನ್‍ಲಾಕ್ ಆಸ್ಪತ್ರೆಗೆ ಅತ್ಯಂತ ಗಂಭೀರ ಸ್ಥಿತಿಯಲ್ಲಿ ಮಡಿಕೇರಿ ಮೂಲದ ವ್ಯಕ್ತಿಯೋರ್ವರು ದಾಖಲಾಗಿದ್ದರು. ಅಧಿಕ ರಕ್ತದೊತ್ತಡ, ಮಧುಮೇಹ, ಕಿಡ್ನಿ ಸಂಬಂಧಿತ ಸಮಸ್ಯೆ ಸೇರಿದಂತೆ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು ಕೊರೊನಾ ಸೋಂಕಿಗೂ ಒಳಗಾಗಿದ್ದ ವ್ಯಕ್ತಿ ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ.