ಮಡಿಕೇರಿ, ಜು. 4: ಯುವ ಜನಾಂಗ ಮಾದಕ ವಸ್ತು ಸೇವನೆಯಂತಹ ದುಶ್ಚಟಗಳಿಗೆ ಬಲಿಯಾಗಿ, ಅಮೂಲ್ಯವಾದ ಜೀವನವನ್ನು ಹಾಳು ಮಾಡಿಕೊಳ್ಳದೆ ಸಮಾಜದಲ್ಲಿ ಉತ್ತಮ ನಾಗರೀಕರಾಗಿ ಬದುಕಬೇಕು ಎಂದು ವಿಶೇಷಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಆರ್. ಸಂಪತ್‍ಕುಮಾರ್ ಅವರು ತಿಳಿಸಿದ್ದಾರೆ.
ನಗರದ ಶಕ್ತಿಧಾಮ ಮಾದಕ ವ್ಯಸನಿಗಳ ಸಮಗ್ರ ಪುನರ್ವಸತಿ ಕೇಂದ್ರದಲ್ಲಿ ಅಂತರರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಾದಕ ವ್ಯಸನಗಳಿಗೆ ತುತ್ತಾದವರು ಈ ಕೇಂದ್ರದಲ್ಲಿ ಉತ್ತಮ ಚಿಕಿತ್ಸೆ ಪಡೆದುಕೊಂಡು ಕುಟುಂಬದೊಂದಿಗೆ ನೆಮ್ಮದಿಯ ಜೀವನವನ್ನು ನಡೆಸಬೇಕು ಎಂದು ಅವರು ಹೇಳಿದರು.
ಶಸ್ತ್ರ ಚಿಕಿತ್ಸಕ ಡಾ. ವಿ.ಎಸ್. ಸತೀಶ್ ಅವರು ಮಾತನಾಡಿ, ಸಮಾಜದಲ್ಲಿ ಇಂದಿನ ಯುವಕರು ಮಾದಕ ವಸ್ತು ಸೇವನೆಯ ದುಶ್ಚಟಗಳಿಗೆ ಹೆಚ್ಚಾಗಿ ಬಲಿಯಾಗುತ್ತಿದ್ದಾರೆ. ಆದ ಕಾರಣ ಪೋಷಕರು ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಇಂತಹ ದುಶ್ಚಟಗಳಿಗೆ ಬಲಿಯಾಗುವುದನ್ನು ತಪ್ಪಿಸಬೇಕು ಎಂದರು.
ಮಕ್ಕಳ ತಜ್ಞೆ ಡಾ. ಶಿಲ್ಪ ಸತೀಶ್ ಮಾತನಾಡಿ, ಮಾದಕ ವಸ್ತುಗಳ ಚಟಕ್ಕೆ ದಾಸರಾದರೆ, ಸಮಸ್ಯೆ ಖಚಿತ. ಮಾದಕ ವಸ್ತುಗಳನ್ನು ಉಪಯೋಗಿಸುವುದರಿಂದ ರಕ್ತ ಸಂಬಂಧ ಕಾಯಿಲೆಗಳು ದೇಹದ ಅಂಗಾಂಗ ಸಮಸ್ಯೆಗಳು ಮೂರ್ಛೆ ಹೋಗುವುದು, ಭ್ರಮೆ ಉಂಟಾಗುವುದು ಇಂತಹ ಗಂಭೀರ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಉಪನ್ಯಾಸಕ ಪರಶುರಾಮ್ ಮಾತಾನಾಡಿ, ದುಶ್ಚಟಗಳಿಂದ ಸಾಮಾಜಿಕವಾಗಿ, ಆರ್ಥಿಕವಾಗಿ, ಕೌಟುಂಬಿಕವಾಗಿ ಗಂಭೀರ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಆದ ಕಾರಣ ವ್ಯಸನ ಮುಕ್ತರಾಗಿ ಸಮಾಜದಲ್ಲಿ ದುಶ್ಚಟಗಳ ಮುಕ್ತ ಸಮಾಜ ನಿರ್ಮಾಣ ಮಾಡಬೇಕಾಗುವಂತೆ ಕರೆ ನೀಡಿದರು.
ಕಾರ್ಯಕ್ರಮದ ನಿರೂಪಣೆ ಮತ್ತು ಸ್ವಾಗತವನ್ನು ಶಕ್ತಿಧಾಮದ ಯೋಜನಾ ನಿರ್ದೇಶಕ ಪ್ರಭು ನೆರವೇರಿಸಿದರು. ಸತೀಶ್ ವಂದಿಸಿದರು.