ಕುಶಾಲನಗರ, ಜು. 7: ಕೇಂದ್ರ ಸರಕಾರದ ಬೆಲೆ ಏರಿಕೆ ಮತ್ತು ಜನವಿರೋಧಿ ನೀತಿ ಖಂಡಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.
ಕುಶಾಲನಗರ ನಾಡಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ದ ಘೋಷಣೆ ಕೂಗಿದರು. ಕೊರೊನದಿಂದ ಕಂಗೆಟ್ಟಿರುವ ಜನಸಾಮಾನ್ಯರನ್ನು ತೈಲ ಬೆಲೆ ಏರಿಕೆಯಿಂದ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸುವ ಜನವಿರೋಧಿ ನೀತಿಗಳನ್ನು ಕೇಂದ್ರ ಸರಕಾರ ಜಾರಿಗೊಳಿಸಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಸರಕಾರಕ್ಕೆ ಸೂಚನೆ ನೀಡುವಂತೆ ಜನಸಾಮಾನ್ಯರ ಸಂಕಷ್ಟ ಪರಿಹರಿಸಲು ಆಗ್ರಹಿಸಿ ಕಂದಾಯ ನಿರೀಕ್ಷಕ ಮಧುಸೂದನ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಸ್.ಅನಂತಕುಮಾರ್ ಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ಕುಶಾಲನಗರ ನಗರ ಘಟಕ ಅಧ್ಯಕ್ಷ ಶರೀಫ್ ಇಬ್ರಾಹಿಂ, ಪಕ್ಷದ ಪ್ರಮುಖರಾದ ಅಜ್ಜಳ್ಳಿ ರವಿ, ಜನಾರ್ಧನ್, ಸುರೇಶ್, ದೇವ್, ವರದರಾಜ್ದಾಸ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.