ಮಡಿಕೇರಿ, ಜು. 8: ಪ್ರತಿಯೊಬ್ಬ ವಿದ್ಯಾರ್ಥಿಯು ನಾಯಕತ್ವ ಗುಣವನ್ನು ಬೆಳಸಿಕೊಳ್ಳಬೇಕು. ವಿದ್ಯಾರ್ಥಿ ಜೀವನ ಅಮೂಲ್ಯವಾಗಿದ್ದು ಎನ್‍ಎಸ್‍ಎಸ್ ಚಟುವಟಿಕೆ ನಾಯಕರನ್ನು ಸೃಷ್ಟಿಸುತ್ತದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರು ಹಾಗೂ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಡಾ. ಪಾರ್ವತಿ ಅಪ್ಪಯ್ಯ ತಿಳಿಸಿದರು.

ಮಂಗಳೂರು ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ಘಟಕ, ರಾಜ್ಯ ಎನ್‍ಎಸ್‍ಎಸ್ ಕೋಶ, ಜಂಟಿಯಾಗಿ ಕೊಡಗು ಮತ್ತು ಉಡುಪಿ ಜಿಲ್ಲೆಯ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕ-ಸೇವಕಿಯರಿಗಾಗಿ ಆನ್‍ಲೈನ್ ನಾಯಕತ್ವ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರು ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕು. ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಆ ನಿಟ್ಟಿನಲ್ಲಿ ಎಲ್ಲರೂ ಪರಿಸರಕ್ಕೆ ಸಂಬಂಧಿಸಿದ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಅವರು ತಿಳಿಸಿದರು.

ರಾಜ್ಯ ರಾಷ್ಟ್ರೀಯ ಸೇವಾ ಯೋಜನಾ ಕೋಶದ ಅನುಷ್ಠಾನ ಅಧಿಕಾರಿ ಪೂರ್ಣಿಮಾ ಜೋಗಿ, ಸಂಪನ್ಮೂಲ ವ್ಯಕ್ತಿಗಳಾದ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪೆÇ್ರ. ಸುಬ್ಬಪ್ಪ ಕೈಕಂಬ, ವೆನ್ಲಾಕ್ ಆಸ್ಪತ್ರೆಯ ಕೌನ್ಸಿಲರ್ ಅಕ್ಷತಾ, ಯುವ ಸಂಪನ್ಮೂಲ ಕೇಂದ್ರ ಮಂಗಳೂರಿನ ಮಂಜುಳಾ ಸುನಿಲ್ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ. ವಹಿಸಿದ್ದರು.

ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‍ಎಸ್‍ಎಸ್ ಅಧಿಕಾರಿ ಗೀತಾಂಜಲಿ ಸ್ವಾಗತಿಸಿದರು. ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಎನ್‍ಎಸ್‍ಎಸ್ ಅಧಿಕಾರಿ ಹಾಗೂ ಕೊಡಗು ನೋಡಲ್ ಅಧಿಕಾರಿ ವನಿತ್ ಕುಮಾರ್ ವಂದಿಸಿದರು. ಎನ್‍ಎಸ್‍ಎಸ್ ಅಧಿಕಾರಿ ಅರುಣ್ ಅತಿಥಿಗಳನ್ನು ಪರಿಚಯಿಸಿದರು. ಕೊಡಗು ಮತ್ತು ಉಡುಪಿ ಜಿಲ್ಲೆಯ ಸುಮಾರು 93 ಎನ್‍ಎಸ್‍ಎಸ್ ಸ್ವಯಂಸೇವಕರು ಮತ್ತು ಅಧಿಕಾರಿಗಳು ಆನ್‍ಲೈನ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.